ಅಲಿಗಢ: ಕಾಲೇಜು ಆವರಣದೊಳಗೆ ವಿದ್ಯಾರ್ಥಿನಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಗಳು ಚೂರು ಇರಿದಿದ್ದು, ಘಟನೆ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಅಲಿಗಢ ಜಿಲ್ಲೆಯ ಶ್ರೀ ಟಿಕಾ ರಾಮ್ ಕನ್ಯಾ ಮಹಾವಿದ್ಯಾಲಯದ ಪದವಿಪೂರ್ವ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಚೂರಿ ಇರಿತ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಅಪರಿಚತ ವ್ಯಕ್ತಿಗಳು ಚೂರಿ ಇರಿದು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಯುವತಿ ತನ್ನ ಕುಟುಂಬಸ್ಥರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದು, ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ಹರಡುತ್ತಿದ್ದಂತೆ, ಕುವಾರ್ಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರಾಮ್‌ಘಾಟ್ ರಸ್ತೆಯಲ್ಲಿರುವ ಕಾಲೇಜು ಗೇಟ್‌ನ ಹೊರಗೆ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜಮಾಯಿಸಿ, ಪ್ರತಿಭಟನೆ ನಡೆಸಿದರು.
ವಾಹನ ಸಂಚಾರವನ್ನು ತಡೆದ ಪ್ರತಿಭಟನಾಕಾರರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಅಪರಾಧಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು,
ಕ್ಯಾಂಪಸ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದು, ಈ ದೃಶ್ಯಾವಳಿಗಳ ಮೂಲಕ ಆರೋಪಿಗಳನ್ನು ಗುರುತಿಸಬಹುದು ಎಂದು ಹೇಳಿದರು.
ಈ ನಡುವೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪ್ರತಿಭಟನಾಕಾರರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು, ನಂತರ ಸ್ಥಳದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.
ಸಂತ್ರಸ್ತ ವಿದ್ಯಾರ್ಥಿನಿಯ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಸರ್ವಂ ಸಿಂಗ್ ಅವರು ಹೇಳಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಆರೋಪಿಗಳ ಬಂಧಿಸಲಾಗುವುದು . ಘಟನೆಯ ನಂತರ ಕಾಲೇಜಿನ ಸುತ್ತಲೂ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.