ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಮಿನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
"ಬೆಳಿಗ್ಗೆ 3 ಗಂಟೆಯ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ. ಆಗ್ರಾಕ್ಕೆ ತೆರಳುತ್ತಿದ್ದ ಮಿನಿ-ವ್ಯಾನ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಬಹುಶ: ಚಾಲಕನು ನಿದ್ರೆಯ ಮಂಪರಿನಲ್ಲಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಹೇಳಿದ್ದಾರೆ.
ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಮಿನಿ ವ್ಯಾನ್ ನಜ್ಜುಗುಜ್ಜಾಗಿದ್ದು, ಶವಗಳನ್ನು ಹೊರತೆಗೆಯಲು ಕಟರ್ ಅನ್ನು ಬಳಸಬೇಕಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.