ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಧ್ಯಾಹ್ನ ಏರ್ ಇಂಡಿಯಾ ವಿಮಾನವೊಂದು ಲ್ಯಾಂಡಿಂಗ್ ಆಗುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಆದರೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಹಾಂಗ್ ಕಾಂಗ್ ನಿಂದ ಪ್ರಯಾಣಿಕರನ್ನು ಹೊತ್ತು ಬಂದ ಏರ್ ಇಂಡಿಯಾದ (AI 315) ವಿಮಾನ ಲ್ಯಾಂಡಿಂಗ್ ಆಗುತ್ತಿದ್ದಂತೆಯೇ ಸಹಾಯಕ ವಿದ್ಯುತ್ ಘಟಕದಲ್ಲಿ (Auxiliary Power unit) ಬೆಂಕಿ ಕಾಣಿಸಿಕೊಂಡಿದ್ದು, ಗೇಟ್ ನಲ್ಲಿ ನಿಲ್ಲಿಸಲಾಗಿದೆ.
ಪ್ರಯಾಣಿಕರು ತಮ್ಮ ಲಗೇಜ್ ಗಳನ್ನು ತೆಗೆದುಕೊಂಡು ಇಳಿಯಲು ಪ್ರಯತ್ನಿಸುತ್ತಿರುವಂತೆಯೇ ಈ ಘಟನೆ ನಡೆದಿದೆ.
ಬಳಿಕ ಸಿಸ್ಟಮ್ ವಿನ್ಯಾಸದ ಪ್ರಕಾರ APU ಸ್ವಯಂಚಾಲಿತವಾಗಿ ಸ್ಥಗಿತಗೊಂಡಿದೆ. ಹೀಗಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ವಿಮಾನಯಾನ ಕಂಪನಿಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿಮಾನಕ್ಕೆ ಸ್ವಲ್ಪ ಹಾನಿಯಾಗಿದೆ. ಆದರೆ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ.ಮುಂದಿನ ತನಿಖೆ ನಡೆಯಲಿದೆ ಎಂದು ವಕ್ತಾರರು ಹೇಳಿದ್ದಾರೆ.