ಪಣಜಿ: ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಂದು ತಮ್ಮ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ತೀವ್ರವಾಗಿ ಕಿಡಿಕಾರಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು. ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯ ಪ್ರತಿಬಿಂಬಿಸುತ್ತದೆ ಎಂದು ಶುಕ್ರವಾರ ಹೇಳಿದ್ದಾರೆ.
‘ಮಹದಾಯಿ ಯೋಜನೆ ಆರಂಭಿಸಲು ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದರು.
ಇದಕ್ಕೆ, ಪ್ರತಿಕ್ರಿಯಿಸಿದ್ದ ಶಿವಕುಮಾರ್ ಅವರು, ‘ಕರ್ನಾಟಕಕ್ಕೆ ನೋಟಿಸ್ ನೀಡಲು ಗೋವಾದವರಿಗೆ ಹಕ್ಕಿಲ್ಲ. ಏನೇ ನೋಟಿಸ್ ನೀಡಿದರೂ ನಾವು ಯೋಜನೆ ಕಾಮಗಾರಿ ಆರಂಭಿಸುತ್ತೇವೆ. ಅವರು (ಸಾವಂತ್) ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ ಎಂದಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಮೋದ್ ಸಾವಂತ್ ಅವರು, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ಯೋಜನೆ ವಿಚಾರದಲ್ಲಿ ಗೋವಾ ಸರ್ಕಾರ ಗಂಭೀರವಾಗಿದ್ದು, ಕೇಂದ್ರದೊಂದಿಗೆ ಮಾತುಕತೆ ಮುಂದುವರೆಸುತ್ತದೆ ಎಂದು ಹೇಳಿದ್ದಾರೆ.
ನಿರಾಸೆಗೊಂಡವರು ಮಾತ್ರ ಇಂತಹ ಮಾತುಗಳನ್ನಾಡಲು ಸಾಧ್ಯ. ಎಷ್ಟು ಕೆಳಮಟ್ಟಕ್ಕೆ ಇಳಿಯಬಹುದು ಎಂಬುದರ ಕುರಿತು ಕಾಂಗ್ರೆಸ್ ನಾಯಕರು ತಮ್ಮತಮ್ಮಲ್ಲೇ ಪೈಪೋಟಿ ನಡೆಸುತ್ತಿದ್ದಾರೆಂದು ತಿಳಿಸಿದರು.
ಮಹದಾಯಿ ನದಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕದ ಕಳಸಾ-ಬಂಡೂರಿ ಯೋಜನೆಯನ್ನು ಗೋವಾ ವಿರೋಧಿಸುತ್ತಿದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಪೂರೈಕೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರದ ಕಳಸಾ-ಬಂಡೂರಿ ಯೋಜನೆಯು ಮಹದಾಯಿ ನದಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಲು ಪ್ರಸ್ತಾಪಿಸಿದೆ.
ಮಹದಾಯಿ ಅರಬ್ಬಿ ಸಮುದ್ರವನ್ನು ಸೇರುವ ಮೊದಲು ಕರ್ನಾಟಕ ಮತ್ತು ಗೋವಾದ ಮೂಲಕ ಹರಿಯುತ್ತದೆ. ಗೋವಾದಲ್ಲಿ ಮಾಂಡೋವಿ ಎಂದು ಕರೆಯಲ್ಪಡುವ ಇದು ರಾಜ್ಯದ ಎರಡು ಪ್ರಮುಖ ನದಿಗಳಲ್ಲಿ ಒಂದಾಗಿದೆ.
ಮಹದಾಯಿ ನೀರಿನ ತಿರುವು ಕರ್ನಾಟಕ ಮತ್ತು ಗೋವಾ ನಡುವೆ ಬಹಳ ಹಿಂದಿನಿಂದಲೂ ವಿವಾದದ ವಿಷಯವಾಗಿದ್ದು, ಇದು ರಾಜ್ಯದ ಸಸ್ಯ ಮತ್ತು ಪ್ರಾಣಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ" ಎಂದು ಗೋವಾ ಹೇಳಿಕೊಂಡಿದೆ.
2018 ರಲ್ಲಿ, ಮಹದಾಯಿ ಜಲ ವಿವಾದ ನ್ಯಾಯಮಂಡಳಿ ಅಂತರರಾಜ್ಯ ಜಲ ವಿವಾದವನ್ನು ಇತ್ಯರ್ಥಪಡಿಸಿ, ಕರ್ನಾಟಕಕ್ಕೆ 13.42 ಟಿಎಂಸಿ ಅಡಿ, ಮಹಾರಾಷ್ಟ್ರಕ್ಕೆ 1.33 ಟಿಎಂಸಿ ಅಡಿ ಮತ್ತು ಗೋವಾಕ್ಕೆ 24 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಿತ್ತು. ಇದಕ್ಕೆ ಕೇಂದ್ರ ಸರ್ಕಾರವು 2020ರಲ್ಲಿ ಅಧಿಸೂಚನೆ ಹೊರಡಿಸಿತು.