ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಬ್ಲಾಕ್ ಮೈತ್ರಿಕೂಟಗಳ ಹಲವು ಸಂಸದರು ಶುಕ್ರವಾರ ಸಂಸತ್ ಭವನದ ಸಂಕೀರ್ಣದಲ್ಲಿ 'ಸರ್' ಎಂದು ಬರೆದ ಪೋಸ್ಟರ್‌ಗಳನ್ನು ಹರಿದು ಕಸದ ಬುಟ್ಟಿಗೆ ಹಾಕುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.
ಸಂಸತ್ ಭವನದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.
ಇಂದು ದಿನದ ಕಲಾಪ ಆರಂಭವಾಗುವ ಮುನ್ನ, ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ, ಟಿಎಂಸಿ, ಆರ್‌ಜೆಡಿ ಮತ್ತು ಎಡಪಕ್ಷಗಳ ಸದಸ್ಯರು ಸೇರಿದಂತೆ ವಿರೋಧ ಪಕ್ಷದ ಹಲವಾರು ಸಂಸದರು 'ಸರ್- ಲೋಕತಂತ್ರ ಪರ್ ವರ್' ಎಂಬ ಬ್ಯಾನರ್‌ನೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಂತರ ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಒಂದು ಕಸದ ಡಬ್ಬಿಯನ್ನು ಇರಿಸಿ ಅಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಒಬ್ಬೊಬ್ಬರಾಗಿ SIR ಎಂದು ಬರೆದಿದ್ದ ಪೋಸ್ಟರ್ ನ್ನು ಹರಿದು ಕಸದ ಡಬ್ಬಿಯಲ್ಲಿ ಹಾಕಿದರು.
"ಪ್ರಜಾಪ್ರಭುತ್ವವನ್ನು ಉಳಿಸಿ" "ಮತ-ಬಂದಿ ನಿಲ್ಲಿಸಿ" ಎಂಬ ಘೋಷಣೆಗಳನ್ನು ಕೂಗಿದರು. ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ, ಚುನಾವಣಾ ಆಯೋಗದ ಈ ಕಾರ್ಯವು ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷಗಳ ನಾಯಕರು ಆರೋಪಿಸಿದರು.
ಕಲಾಪ ಮುಂದೂಡಿಕೆ: ಲೋಕಸಭೆಯಲ್ಲಿ ತೀವ್ರ ಗದ್ದಲ ಏರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮತ್ತು ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.