ಅಹಲ್ಯಾನಗರ: ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಪ್ರಸಿದ್ಧ ಶನಿ ಶಿಂಗ್ಣಾಪುರ ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್‌ನ ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(Dy CEO) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವಾಲಯದ ಕಾರ್ಯನಿರ್ವಹಣೆಯಲ್ಲಿ ಭ್ರಷ್ಟಾಚಾರ ಬಹಿರಂಗವಾದ ವಾರಗಳ ನಂತರ ಈ ಆಘಾತಕಾರಿ ಘಟನೆ ನಡೆದಿದೆ.
ಶ್ರೀ ಶನೇಶ್ವರ ದೇವಸ್ಥಾನದ ಉಪ ಸಿಇಒ ನಿತಿನ್ ಶೇಟ್(43) ಮುಂಬೈನಿಂದ ಸುಮಾರು 300 ಕಿ.ಮೀ ದೂರದಲ್ಲಿರುವ ಶನಿ ಶಿಂಗ್ಣಾಪುರ ಗ್ರಾಮದ ಶೇಟ್ ವಸ್ತಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇವಾಲಯ ನಿರ್ವಹಣಾ ಸಂಸ್ಥೆಯ ಮಾಜಿ ಟ್ರಸ್ಟಿಯೂ ಆಗಿದ್ದ ಶೇಟ್ ಅವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಶೇಟ್ ಅವರ ಕುಟುಂಬ ಸದಸ್ಯರು ಪದೇ ಪದೇ ಅವರ ಕೋಣೆಯ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆತಂಕಗೊಂಡ ಕುಟುಂಬ ಸದಸ್ಯರು ನೆರೆಹೊರೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಉಪ ಸಿಇಒ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡ ಶೇಟ್ ಅವರನ್ನು ಆಸ್ಪತ್ರೆಗೆ ಸಾಗಿಸಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಕಲಿ ಅಪ್ಲಿಕೇಶನ್‌ಗಳ ಮೂಲಕ ದೇಣಿಗೆ ಸಂಗ್ರಹಿಸುವ ಮತ್ತು ದೇವಾಲಯದ ದೈನಂದಿನ ಕಾರ್ಯಾಚರಣೆಯಲ್ಲಿ ಭ್ರಷ್ಟಾಚಾರದ ಆರೋಪ ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲೂ ಪ್ರತಿಧ್ವನಿಸಿತ್ತು.