ಮಧುರೈ: 2026ರಲ್ಲಿ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಧುರೈಯನ್ನು 'ಪರಿವರ್ತನೆಯ ನಗರ' ಎಂದು ಶ್ಲಾಘಿಸಿದರು. ತಮ್ಮ ಪಕ್ಷದ ಕಾರ್ಯಕರ್ತರ ಸಭೆ ಬದಲಾವಣೆಗೆ ಕಾರಣವಾಗುವುದಲ್ಲದೆ, ಡಿಎಂಕೆಯನ್ನು ಅಧಿಕಾರದಿಂದ ಕಿತ್ತೊಗೆಯಲಿದೆ ಎಂದರು.
2026 ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ BJP-AIADMK ಎನ್‌ಡಿಎ ಸರ್ಕಾರವನ್ನು ರಚಿಸಲಿದೆ. 2026 ರ ಚುನಾವಣೆಯಲ್ಲಿ ಜನರು ಡಿಎಂಕೆಯನ್ನು ಸೋಲಿಸುತ್ತಾರೆ. ಡಿಎಂಕೆ ಶೇಕಡಾ 100 ರಷ್ಟು ವಿಫಲ ಸರ್ಕಾರವಾಗಿದೆ. 2026ರಲ್ಲಿ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದರು.
ಇದಕ್ಕೂ ಮುನ್ನಾ ಅಮಿತ್ ಶಾ ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ತಮಿಳುನಾಡಿಗೆ ಭೇಟಿ ನೀಡಿದಾಗ AIADMK ಜೊತೆಗೆ ಮತ್ತೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದರು. ಪಶ್ಚಿಮ ಕೊಂಗು ಪ್ರದೇಶದ ಹಳ್ಳಿಗಳಲ್ಲಿ ವಯೋವೃದ್ಧರನ್ನು ಗುರಿಯಾಗಿಸಿಕೊಂಡು ನಡೆದ ಹತ್ಯೆ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದರು.
AIADMK ಜೊತೆಗಿನ ಮೈತ್ರಿಯನ್ನು ಸೂಕ್ತ ಮೈತ್ರಿ ಎಂದು ಹೇಳಿದ ಅವರು ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟು, ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.