ಪುಣೆ: ಮಹಾರಾಷ್ಟ್ರದ ಪುಣೆ ಬಳಿಯ ಇಂದ್ರಾಯಣಿ ನದಿ ಸೇತುವೆಯೊಂದು ಭಾನುವಾರ ಕುಸಿದು ಬಿದಿದ್ದು, ನಾಲ್ವರು ಪ್ರವಾಸಿಗರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಪಿಂಪ್ರಿ-ಚಿಂಚ್‌ವಾಡ್ ಜಿಲ್ಲೆಯ ಮಾವಲ್ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕುಂದಮಾಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ರಮಣೀಯ ಜಲಪಾತ ಮತ್ತು ನದಿ ದಡದಿಂದ ಪ್ರತಿವರ್ಷ ನೂರಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಇಂದು ಕೂಡಾ ಹೆಚ್ಚಾಗಿ ಪ್ರವಾಸಿಗರು ಆಗಮಿಸಿದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ.
5 ರಿಂದ 6 ಜನರನ್ನು ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.
ಇದಕ್ಕಿದ್ದಂತೆ ಸೇತುವೆ ಕುಸಿದು ಬಿದ್ದಿದೆ.. ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದ ತುಂಬಿ ಹರಿಯುತ್ತಿದ್ದ ನದಿಗೆ ಡಜನ್ ಮಂದಿ ಇಳಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ, 32 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಆರು ಜನರ ಪರಿಸ್ಥಿತಿ ಗಂಭೀರವಾಗಿದೆ. ಇಲ್ಲಿಯವರೆಗೂ ಆರು ಜನರನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೃಹತ್ ರಕ್ಷಣಾ ಕಾರ್ಯಾಚರಣೆ ಆರಂಭ: ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ರ ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಭಾಗವಾಗಿ ದೋಣಿಗಳು, ಡೈವರ್‌ಗಳು ಮತ್ತು ಡ್ರೋನ್‌ಗಳನ್ನು ನಿಯೋಜಿಸಲಾಗಿದೆ. ಇಲ್ಲಿಯವರೆಗೆ, ಕೆಲವು ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇನ್ನೂ ನಾಪತ್ತೆಯಾದರ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ.
ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಇಂದ್ರಾಯಣಿ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಸಿಗರು ನದಿ ದಡದಿಂದ ದೂರವಿರುವಂತೆ ಅವರು ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಎಚ್ಚರಿಕೆ ನೀಡಿದ್ದಾರೆ.