ಕೋಝಿಕ್ಕೋಡ್: ಕ್ಷುಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಉಂಟಾದ ಜಗಳ ಬಾಲಕನೊಬ್ಬನ ಸಾವಿನಲ್ಲಿ ಅಂತ್ಯಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.
ಜಿಲ್ಲೆಯ ಖಾಸಗಿ ಟ್ಯೂಷನ್ ಸೆಂಟರ್ ಬಳಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ತಲೆಗೆ ತೀವ್ರವಾಗಿ ಗಾಯಗೊಂಡ 10 ನೇ ತರಗತಿಯ ವಿದ್ಯಾರ್ಥಿ ಶನಿವಾರ ಮುಂಜಾನೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಝಿಕ್ಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೊಹಮ್ಮದ್ ಶಹಬಾಸ್ (16) ಬೆಳಗಿನ ಜಾವ 1 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದರು.
ಮೃತಪಟ್ಟ ಮೊಹಮ್ಮದ್ ಶಹಬಾಸ್ ವೆಂಟಿಲೇಟರ್ ನೆರವಿನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 23 ರಂದು ತಾಮರಸ್ಸೆರಿಯ ಟ್ಯೂಷನ್ ಸೆಂಟರ್‌ನಲ್ಲಿ ನಡೆದ ಬೀಳ್ಗೂಡುಗೆ ಸಮಾರಂಭದ ವೇಳೆ ಕ್ಷುಲಕ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಈ ವಿಚಾರದ ಬಗ್ಗೆ ಗುರುವಾರವೂ ಸಂಜೆ 5 ಗಂಟೆ ಸುಮಾರಿನಲ್ಲಿ ಮೊಹಮ್ಮದ್ ಶಹಬಾಸ್ ಸೇರಿದಂತೆ ಎರಡು ಸ್ಥಳೀಯ ಶಾಲೆಯ ಸುಮಾರು 15 ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ.
ಘಟನೆಯ ಕುರಿತು ಇಲಾಖಾ ತನಿಖೆಯನ್ನು ಪ್ರಾರಂಭಿಸುವಂತೆ ಸಾಮಾನ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಶನಿವಾರ ಸಾಮಾನ್ಯ ಶಿಕ್ಷಣ ನಿರ್ದೇಶಕರಿಗೆ ಸೂಚಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ವಿಚಾರಣೆ ನಡೆಸಿ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.