ನವದೆಹಲಿ: ಕರ್ನಾಟಕದ ವಿಶ್ವವಿದ್ಯಾಲಯಗಳ ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಈ ವಿಶ್ವವಿದ್ಯಾಲಯಗಳು ಮರಣಶಯ್ಯೆಯಲ್ಲಿವೆ ಎಂದು ರಾಜ್ಯಸಭೆಯ ಜೆಡಿಎಸ್ ಸದಸ್ಯ ಎಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದರು.
ಶಿಕ್ಷಣ ಸಚಿವಾಲಯದ ಕಾರ್ಯವೈಖರಿಯ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಪನ್ಯಾಸಕರು ಸೇರಿದಂತೆ ಸಿಬ್ಬಂದಿಗೆ ಸಂಬಳ ನೀಡಲು ವಿವಿಗಳ ಬಳಿ ಹಣವಿಲ್ಲ. ಕೇಂದ್ರ ಸರ್ಕಾರ ಅವುಗಳನ್ನು ರಕ್ಷಿಸಲು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದ ಅತ್ಯಂತ ಹಳೆಯ ಸಂಸ್ಥೆಗಳಾದ ಮೈಸೂರು ವಿಶ್ವವಿದ್ಯಾಲಯ ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ.
ಈ ಎರಡು ಸಂಸ್ಥೆಗಳಲ್ಲಿ ಹಲವಾರು ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಇವೆ, ವಿಶ್ವವಿದ್ಯಾಲಯಗಳು ಸ್ಥಿತಿ ದಯನೀಯವಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಕೂಡಲೇ ಮಧ್ಯಪ್ರವೇಶಿಸಿ ಅನುದಾನ ಬಿಡುಗಡೆ ಮಾಡಬೇಕು. ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಸಲಹೆ ನೀಡಿದರು.
ಮೈಸೂರು ವಿಶ್ವವಿದ್ಯಾಲಯವು ದೇಶದ ಹಳೆಯ ವಿಶ್ವವಿದ್ಯಾಲಯಗಳಲ್ಲಿ ಒಂದು. ಶತಮಾನೋತ್ಸವ ಆಚರಿಸಿರುವ ವಿ.ವಿಯು ಸಂಕಷ್ಟದ ಸ್ಥಿತಿಯಲ್ಲಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಉಪನ್ಯಾಸಕರು ಹಾಗೂ ಸಿಬ್ಬಂದಿಗೆ ಕೆಲವು ತಿಂಗಳಿಂದ ಸರಿಯಾಗಿ ವೇತನ ಪಾವತಿ ಆಗಿಲ್ಲ ಎಂದು ಗಮನ ಸೆಳೆದರು.
ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ಹೆಚ್ಚಿನ ರಾಜ್ಯಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿವಾದಕ್ಕೆ ಕಾರಣವಾಗುತ್ತಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಇದಕ್ಕೊಂದು ಪರಿಹಾರ ಹುಡುಕಬೇಕು ಎಂದು ಅವರು ಸಲಹೆ ನೀಡಿದರು.
ರಾಜ್ಯದಲ್ಲಿ 30 ಕ್ಕೂ ಹೆಚ್ಚು ಖಾಸಗಿ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಕೇಂದ್ರವು ರಾಜಕೀಯವನ್ನು ಬೆರೆಸದೆ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳಿಗೆ ಅನುದಾನವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಬೇಕು. ನನ್ನ ವಿನಂತಿಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತದೆ ಎಂದು ಭಾವಿಸುತ್ತೇನೆ ಮತ್ತು ನಂಬುತ್ತೇನೆ’ ಎಂದು ದೇವೇಗೌಡ ಹೇಳಿದ್ದಾರೆ.