ಕೇರಳ: ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಐವರು ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕರ್ತರ ಮೇಲೆ ಗುರುವಾರ ಕೇಸ್ ದಾಖಲಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 189 (2), 191 (2), 190 ಮತ್ತು 126 (2) ಅಡಿಯಲ್ಲಿ ಕಾನೂನುಬಾಹಿರ ಸಭೆ, ಗಲಭೆ ಮತ್ತು ಅಕ್ರಮ ನಿರ್ಬಂಧದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತ ತನಿಖೆ ನಡೆಯುತ್ತಿದ್ದು, ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬುಧವಾರ ಸಂಜೆ ಸಮೀಪದ ನೆಯ್ಯಟ್ಟಿಂಕರದಲ್ಲಿ ತುಷಾರ್ ಗಾಂಧಿ ಭಾಗವಹಿಸಿದ್ದ ಕಾರ್ಯಕ್ರಮದ ಕೊನೆಯಲ್ಲಿ ಸಂಘಪರಿವಾರದೊಂದಿಗೆ ನಂಟು ಹೊಂದಿರುವ ಕೆಲ ಜನರು ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಕೇಸರಿ ಸಂಘಟನೆ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಒತ್ತಾಯಿಸುತ್ತಿರುವ ದೃಶ್ಯವನ್ನು ಕೆಲವು ಟಿವಿ ಚಾನೆಲ್ ಗಳು ಪ್ರಸಾರ ಮಾಡಿವೆ.
ಇದಕ್ಕೂ ಮುನ್ನಾ ತುಷಾರ್ ಗಾಂಧಿ ವಿರುದ್ಧ ಸಂಘ ಪರಿವಾರದ ದಾಳಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅಡಗಿಸುವುವುದಕ್ಕೆ ಪ್ರಜಾಪ್ರಭುತ್ವ ಸಮಾಜದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಗಾಂಧೀವಾದಿ ದಿವಂಗತ ಪಿ ಗೋಪಿನಾಥನ್ ನಾಯರ್ ಅವರ ಪ್ರತಿಮೆ ಅನಾವರಣಗೊಳಿಸಲು ತುಷಾರ್ ಗಾಂಧಿ ನೆಯ್ಯಟಿಂಕರಕ್ಕೆ ಆಗಮಿಸಿದ್ದರು.
ಈ ವೇಳೆ ತಮ್ಮ ಭಾಷಣದಲ್ಲಿ ಯುಡಿಎಫ್ ಮತ್ತು ಎಲ್‌ಡಿಎಫ್ ಪರಸ್ಪರ ಪೈಪೋಟಿಯ ಸುದೀರ್ಘ ಇತಿಹಾಸವನ್ನು ಹೊಂದಿರುವ ರಾಜ್ಯದಲ್ಲಿ ಅತ್ಯಂತ ಅಪಾಯಕಾರಿ ಮತ್ತು ಕಪಟ ಶತ್ರು ಆರ್ ಎಸ್ ಎಸ್ ಮತ್ತು ಬಿಜೆಪಿ ಕೇರಳವನ್ನು ಪ್ರವೇಶಿಸಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದ್ದರು.