ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಮೆರಿಕ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ಸಭೆಯಲ್ಲಿ ರಾಜನಾಥ್ ಸಿಂಗ್ ಅವರು ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪು ಸಿಖ್ಸ್ ಫಾರ್ ಜಸ್ಟೀಸ್(SFJ) ಅಮೆರಿಕದಲ್ಲಿ ನಡೆಸುವ ಚಟುವಟಿಕೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅದನ್ನು ಘೋಷಿತ ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವಂತೆ ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.
ರೈಸಿನಾ ಹಿಲ್ಸ್‌ನಲ್ಲಿರುವ ತಮ್ಮ ಕಚೇರಿಯಲ್ಲಿ 30 ನಿಮಿಷಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ಸಿಂಗ್ ಅವರು ಪಾಕಿಸ್ತಾನದ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್(ISI) ಜೊತೆಗೆ ನಂಟು ಹೊಂದಿರುವ SFJ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಗುರುಪತ್ವಂತ್ ಸಿಂಗ್ ಪನ್ನುನ್ ನೇತೃತ್ವದ SFJ ಅಮೆರಿಕದಲ್ಲಿ ವಿವಿಧ ಹಿಂದೂ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಸಿಂಗ್ ಕಳವಳ ವ್ಯಕ್ತಪಡಿಸಿದರು ಮತ್ತು ಅಂತಹ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಅಮೆರಿಕಕ್ಕೆ ಆಗ್ರಹಿಸಿರುವುದಾಗಿ ಮೂಲಗಳು ತಿಳಿಸಿವೆ.
SFJ ಭಾರತದಲ್ಲಿ ನಿಷೇಧಿತ ಉಗ್ರ ಸಂಘಟನೆಯಾಗಿದೆ. ವಿವಿಧ ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿರುವ ಪನ್ನುನ್ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾರೆ.