ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಅವರು ಗುರುವಾರ ಶ್ರೀನಗರದ ತುಳಸಿ ಬಾಗ್‌ನಲ್ಲಿರುವ ಸರ್ಕಾರಿ ಕ್ವಾರ್ಟರ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
2024 ರ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಗುರೆಜ್‌ನಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಖಾನ್, ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಈ ತೀವ್ರ ನಡೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.
ಖಾನ್ 1996 ರಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಪಕ್ಷೇತರ ಶಾಸಕರಾಗಿಆಯ್ಕೆಯಾಗಿದ್ದರು. ನಂತರ ಅವರು 2024 ರ ಚುನಾವಣೆಗೆ ಮುನ್ನ ಬಿಜೆಪಿ ಸೇರಿದರು ಮತ್ತು ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಸ್ಪರ್ಧಿಸಿದ್ದರು. ಆದರೆ ಎನ್‌ಸಿಯ ನಜೀರ್ ಅಹ್ಮದ್ ಗುರೇಜಿ ವಿರುದ್ಧ ಸೋಲು ಅನುಭವಿಸಿದ್ದರು.
ಖಾನ್ ಸಾವಿಗೆ ತೀವ್ರ ದುಃಖ ವ್ಯಕ್ತಪಡಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, "ಮಾಜಿ ಶಾಸಕ ಫಕೀರ್ ಮೊಹಮ್ಮದ್ ಖಾನ್ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರು ಜನಸಾಮಾನ್ಯರ ನಾಯಕರಾಗಿದ್ದರು. ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಹೇಳಿದ್ದಾರೆ.
ಖಾನ್ ಗೌರವಾರ್ಥವಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಎರಡು ನಿಮಿಷಗಳ ಕಾಲ ಮೌನ ಆಚರಿಸಿತು.