ನವದೆಹಲಿ: ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳು ಮೇ 15 ರಿಂದ ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಲಿವೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಮಂಗಳವಾರ ರಾತ್ರಿ ಆಶಾವಾದ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಉನ್ನತ ಅಧಿಕಾರಿಗಳು ಮತ್ತು ಎಲ್ಲಾ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದರು.
NOTAM ಹೊರಡಿಸಿದ ಎಲ್ಲಾ 32 ವಿಮಾನ ನಿಲ್ದಾಣಗಳಲ್ಲಿ 15 ರಿಂದ ವಿಮಾನಯಾನ ಸಂಸ್ಥೆಗಳು ತಮ್ಮ ಸಾಮಾನ್ಯ ವೇಳಾಪಟ್ಟಿಯನ್ನು ಪುನರಾರಂಭಿಸುವಂತೆ ಸೂಚಿಸಿದ್ದೇನೆ. ಈ ಸಲಹೆಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಚಿವರು ಹೇಳಿದ್ದಾರೆ.
ಸದ್ಯ, ಭಾಗಶಃ ಕಾರ್ಯಾಚರಣೆಗಳು ನಡೆಯುತ್ತಿವೆ. ಪೂರ್ಣ ಪ್ರಮಾಣದ ಕಾರ್ಯಾಚರಣೆಗಳು ಮೇ 15 ರಿಂದ ಪುನರಾರಂಭಗೊಳ್ಳಲಿವೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಮೇ 7 ರಂದು ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಮೇ 9 ರಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮೇ 15 (ಬೆಳಿಗ್ಗೆ 5.29) ವರೆಗೆ ಉತ್ತರ ಮತ್ತು ಪಶ್ಚಿಮ ಭಾರತದ 32 ವಿಮಾನ ನಿಲ್ದಾಣಗಳನ್ನು ಮುಚ್ಚುವ NOTAM ಅನ್ನು ಹೊರಡಿಸಿತು.