ಆಂಧ್ರಪ್ರದೇಶ/ತುಮಕೂರು: ನೆರೆಯ ಆಂಧ್ರ ಪ್ರದೇಶದ ಪ್ರಸಿದ್ಧ ದೇವಾಲಯಗಳಿಗೆ ತೆರಳಿ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ತುಮಕೂರಿನ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ನಂದ್ಯಾಲ್ ಜಿಲ್ಲೆಯ ಪಯಾಪಿಲಿ ಮಂಡಲದ ಪೊದೊಡ್ಡಿ ಗ್ರಾಮದ ಬಳಿ ಟೊಯೊಟಾ ಇನ್ನೋವಾ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ.
ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಸ್ನೇಹಿತರಾಗಿದ್ದು, ತುಮಕೂರು ಮೂಲದವರು ಎಂದು ತಿಳಿದುಬಂದಿದೆ. ಅವರು ಪ್ರಸಿದ್ಧ ಶ್ರೀ ಶೈಲಂ ಮಲ್ಲಿಕಾರ್ಜುನ ಸ್ವಾಮಿ ಮತ್ತು ಮಹಾನಂದಿ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ತುಮಕೂರಿಗೆ ವಾಪಸ್ಸಾಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರನ್ನು ಸಂತೋಷ್, ಲೋಕೇಶ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಇತರ ಮೂವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ತಿಂಗಳ ಆರಂಭದಲ್ಲಿ ಅದೋನಿ ಜಿಲ್ಲೆಯಲ್ಲಿ ಸಂಭವಿಸಿದ್ದ ಇದೇ ರೀತಿಯ ಘಟನೆಯಲ್ಲಿ, ನಾಲ್ವರು ಪ್ರಾಣ ಕಳೆದುಕೊಂಡಿದ್ದರು. ಶ್ರೀಶೈಲದಲ್ಲಿ ಪೂಜೆ ಸಲ್ಲಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅಪಘಾತ ಸಂಭವಿಸಿತ್ತು. ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ, ಗಾಯಗೊಂಡವರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಸೇವೆ ಒದಗಿಸಬೇಕು, ಮೃತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ (ಎಚ್‌ಆರ್‌ಡಿ) ನಾರಾ ಲೋಕೇಶ್ ಮತ್ತು ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಕೂಡ ಪ್ರತ್ಯೇಕ ಹೇಳಿಕೆಯಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ.