ಸಮಸ್ತಿಪುರ: ಬಿಹಾರದ ಸಮಸ್ತಿಪುರ ಜಿಲ್ಲೆಯ ರಸ್ತೆ ಬದಿಯಲ್ಲಿ ರಾಶಿ ರಾಶಿಯಲ್ಲಿ VVPAT ಚೀಟಿಗಳು ಪತ್ತೆಯಾದ ನಂತರ ಸಹಾಯಕ ಚುನಾವಣಾ ಅಧಿಕಾರಿಯನ್ನು ಶನಿವಾರ ಅಮಾನತುಗೊಳಿಸಲಾಗಿದ್ದು, ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯ ಸರಾಯ್ ರಂಜನ್ ವಿಧಾನಸಭಾ ಕ್ಷೇತ್ರದ ಕಾಲೇಜು ಬಳಿಯ ರಸ್ತೆ ಬದಿಯಲ್ಲಿ VVPAT ಚೀಟಿಗಳು ಬಿದ್ದಿರುವುದು ಕಂಡುಬಂದಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಳಕ್ಕೆ ಭೇಟಿ ನೀಡಿ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.
"ಇವು ಅಣಕು ಮತದಾನ VVPAT ಚೀಟಿಗಳಾಗಿರುವುದರಿಂದ, ಮತದಾನ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಯಾವುದೇ ಧಕ್ಕೆ ಉಂಟಾಗಿಲ್ಲ. ಕಣದಲ್ಲಿರುವ ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅದರೂ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಹಾರ ವಿಧಾನಸಭೆಗೆ ನವೆಂಬರ್ 6 ರಂದು 121 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆದಿತ್ತು.