ಶ್ರೀನಗರ: ಕಾಶ್ಮೀರ, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಲಖನೌನ ಮಹಿಳಾ ವೈದ್ಯೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬಂಧಿತ ವೈದ್ಯೆಯ ಕಾರಿನಿಂದ ಎಕೆ-47 ರೈಫಲ್ ವಶಪಡಿಸಿಕೊಳ್ಳಲಾಗಿದೆ. ವೈದ್ಯೆ ಡಾ. ಶಾಹೀನ್ ಸೇರಿದಂತೆ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಏಳು ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದಕ್ಕು ಮುನ್ನ ಹರಿಯಾಣದ ಫರಿದಾಬಾದ್‌ನಲ್ಲಿ ಕಾಶ್ಮೀರದ ಡಾ. ಮುಜಮ್ಮಿಲ್ ಗನೈ ಅವರನ್ನು ಬಂಧಿಸಲಾಗಿತ್ತು. ಡಾ. ಶಾಹೀನ್ ಅವರನ್ನು ವಿಮಾನದ ಮೂಲಕ ಶ್ರೀನಗರಕ್ಕೆ ಕಸ್ಟಡಿ ವಿಚಾರಣೆಗಾಗಿ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂವರು ವೈದ್ಯರು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದ್ದು, ಜೈಶ್-ಎ-ಮೊಹಮ್ಮದ್ ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ ಒಳಗೊಂಡ ವೈಟ್ ಕಾಲರ್ ಭಯೋತ್ಪಾದಕ ಸಂಘಟನೆಯನ್ನು ಪತ್ತೆಹಚ್ಚುವುದರೊಂದಿಗೆ 2,900 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ ಮತ್ತು ಹರಿಯಾಣದ ಪೊಲೀಸ್ ಪಡೆಗಳು ಹಾಗೂ ಕೇಂದ್ರ ಏಜೆನ್ಸಿಗಳ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಬಂಧನಗಳು ಯಾವಾಗ ನಡೆದವು ಎಂಬುದರ ವಿವರಗಳನ್ನು ಅವರು ಬಹಿರಂಗಪಡಿಸಿಲ್ಲ.