ನವದೆಹಲಿ: ದೆಹಲಿಯ ಕೆಂಪುಕೋಟೆ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದ್ದು, ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿಗೆ ಆಶ್ರಯ ನೀಡಿದ್ದ ಆರೋಪಿಯನ್ನು ಬುಧವಾರ ಬಂಧನಕ್ಕೊಳಪಡಿಸಿದೆ.
ಫರಿದಾಬಾದ್‌ನ ಧೌಜ್ ನಿವಾಸಿ ಸೋಯಾಬ್ ಬಂಧಿತ ಆರೋಪಿ. ಈತನ ಬಂಧನದೊಂದಿಗೆ ಪ್ರಕರಣ ಸಂಬಂಧ ಈ ವರೆಗೂ ಬಂಧನಕ್ಕೊಳಗಾರಿರುವವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಸೋಯಾಬ್ ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿಗೆ ಸ್ಫೋಟಕ್ಕೆ ಸ್ವಲ್ಪ ಮೊದಲು ಆಶ್ರಯ ನೀಡಿದ್ದು, ಲಾಜಿಸ್ಟಿಕ್ ಸಹಾಯ ಮಾಡಿದ್ದಾನೆ ಎಂಬ ಸಾಕ್ಷ್ಯಗಳು ಎನ್ಐಎಗೆ ದೊರೆತಿವೆ. ಈ ಹಿನ್ನೆಲೆಯಲ್ಲಿ ಸೋಯಾಬ್ ಖಾನ್ನನ್ನು ಎನ್ಐಎ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಬಂಧನದಲ್ಲಿರುವ ಡಾ. ಮುಜಮ್ಮಿಲ್ ಶಕೀಲ್ ಗನೈ ಜೊತೆಗೆ ಸೋಯಾಬ್ ಮನೆಗೆ ಎನ್‌ಐಎ ದಾಳಿ ನಡೆಸಿದ ವೇಳೆ ಮನೆಯಲ್ಲಿ ಗ್ರೈಂಡರ್ ಮತ್ತು ಪೋರ್ಟಬಲ್ ಫರ್ನೇಸ್ ಪತ್ತೆಯಾಗಿದ್ದು, ಇವುಗಳನ್ನು ಐಇಡಿ ತಯಾರಿಕೆಗೆ ಬಳಸಲಾಗಿದೆ ಎಂದು ಶಂಕಿಸಲಾಗಿದೆ.
ಸೋಯಾಬ್‌ಗೆ ದಾಳಿಯ ಯೋಜನೆಯ ಬಗ್ಗೆ ಪೂರ್ಣ ತಿಳುವಳಿಕೆ ಇತ್ತು ಮತ್ತು ತಿಳಿದೇ ಉಮರ್‌ಗೆ ಸಹಾಯ ಮಾಡಿದ್ದಾನೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ. ಇದೀಗ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಎನ್‌ಐಎ ಕಸ್ಟಡಿ ಕೋರುವ ಸಾಧ್ಯತೆಗಳಿವೆ.
ನವೆಂಬರ್ 10ರ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ಚಲಿಸುತ್ತಿದ್ದ ಹುಂಡೈ ಐ20 ಕಾರು ಇದ್ದಕ್ಕಿದ್ದಂತೆ ಸ್ಫೋಟಗೊಂಡಿತ್ತು. ಪರಿಣಾಮ ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿ, 29 ಜನ ಗಾಯಗೊಂಡಿದ್ದರು.
ಸ್ಫೋಟದ ವೇಳೆ ಹತ್ತಿರವೇ ಇದ್ದ ಅನೇಕ ವಾಹನಗಳು ಸುಟ್ಟುಹೋಗಿದ್ದು, ಹರಿಯಾಣ ನೋಂದಣಿ ಸಂಖ್ಯೆಯನ್ನು ಹೊಂದಿರುವ ಕಾರಿನಲ್ಲಿ ಸಂಭವಿಸಿದ ಈ ಘಟನೆ ದೆಹಲಿ ಪೊಲೀಸರು, ಎನ್‌ಐಎ, ಎನ್‌ಎಸ್‌ಜಿ ಮತ್ತು ವಿಧಿವಿಜ್ಞಾನ ತಂಡಗಳಿಂದ ಉನ್ನತ ಮಟ್ಟದ ತನಿಖೆಗೆ ಕಾರಣವಾಗಿದೆ.
ಪ್ರಕರಣ ಸಂಬಂಧ ಯುಎಪಿಎ ಮತ್ತು ಸ್ಫೋಟಕ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಭದ್ರತಾ ತಪಾಸಣೆಯೊಂದಿಗೆ ಕಟ್ಟೆಚ್ಚರ ವಹಿಸಲಾಗಿದೆ.