ಹೈದರಾಬಾದ್: ಅಮೆರಿಕದ ಡಲ್ಲಾಸ್‌ನಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್ ಮೂಲದ 28 ವರ್ಷದ ವ್ಯಕ್ತಿಯೊಬ್ಬರಿಗೆ ಶುಕ್ರವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದ ವ್ಯಕ್ತಿಯನ್ನು ಹೈದರಾಬಾದ್ ನ ಎಲ್‌ಬಿ ನಗರ ನಿವಾಸಿ ಪೋಲ್ ಚಂದ್ರಶೇಖರ್ ಎಂದು ಗುರುತಿಸಲಾಗಿದ್ದು, ಅವರು ಉನ್ನತ ವ್ಯಾಸಂಗಕ್ಕಾಗಿ ಡಲ್ಲಾಸ್‌ಗೆ ಹೋಗಿದ್ದರು.
ಚಂದ್ರಶೇಖರ್ ಅವರು ನಗರದಲ್ಲಿ ದಂತ ಶಸ್ತ್ರಚಿಕಿತ್ಸೆಯಲ್ಲಿ ಪದವಿ ಪಡೆದ ನಂತರ ಉನ್ನತ ವ್ಯಾಸಂಗ ಮಾಡಲು 2023ರಲ್ಲಿ ಅಮೆರಿಕಕ್ಕೆ ತೆರಳಿದ್ದರು ಎಂದು ಅವರ ಸಹೋದರ ದಾಮೋದರ್ ಅವರು ತಿಳಿಸಿದ್ದಾರೆ.
ಸುಮಾರು ಆರು ತಿಂಗಳ ಹಿಂದೆ, ಅವರು ಅಮೆರಿಕದಲ್ಲಿ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ್ದರು. ನಂತರ ಅವರು ಅಮೆರಿಕದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಮತ್ತು ಸಂದರ್ಶನಗಳಿಗೆ ಹಾಜರಾಗಲು ಪ್ರಾರಂಭಿಸಿದರು. ಈ ಮಧ್ಯೆ, ಅವರು ತಮ್ಮ ಖರ್ಚುಗಳನ್ನು ಪೂರೈಸಲು ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು.
ಚಂದ್ರಶೇಖರ್ ಅವರ ಮೃತದೇಹವನ್ನು ಭಾರತಕ್ಕೆ ಮರಳಿ ತರುವಂತೆ ಕುಟುಂಬ, ಕೇಂದ್ರ ಸರ್ಕಾರವನ್ನು ವಿನಂತಿಸಿದೆ.
ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪೋಲ್ ಚಂದ್ರಶೇಖರ್ ಅವರ ಸಾವು ನಮಗೆ ತೀವ್ರ ಆಘಾತ ಮತ್ತು ದುಃಖವನ್ನುಂಟು ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.
"ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಮತ್ತು ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ" ಎಂದು ರೇವಂತ್ ರೆಡ್ಡಿ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಜ್ಯ ಸರ್ಕಾರ ಚಂದ್ರಶೇಖರ್ ಅವರ ಕುಟುಂಬದೊಂದಿಗೆ ನಿಲ್ಲುತ್ತದೆ. ಅವರ ಪಾರ್ಥೀವ ಶರೀರವನ್ನು ಅವರ ಊರಿಗೆ ತರಲು ನಾವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇವೆ" ಎಂದು ಸಿಎಂ ತಿಳಿಸಿದ್ದಾರೆ.