ಹೈದರಾಬಾದ್: ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಅತ್ಯಾಚಾರಕ್ಕೊಳಗಾಗಿ ತಲೆಗೆ ಗಾಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ 33 ವರ್ಷದ ಬುಡಕಟ್ಟು ಮಹಿಳೆಯೊಬ್ಬರು ಭಾನುವಾರ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನಗೂಲಿ ಕಾರ್ಮಿಕರಾದ ಸಂತ್ರಸ್ತೆ ಶುಕ್ರವಾರ ಕೂಲಿ ಕೆಲಸಕ್ಕೆ ಮನೆಯಿಂದ ಹೊರಟಿದ್ದರು.
ಶನಿವಾರ ಬೆಳಿಗ್ಗೆ ಕುಲ್ಚರಂ ಮಂಡಲದಲ್ಲಿ ಮರದ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಮಹಿಳೆಯನ್ನು ಗಮನಿಸಿದ ಕೆಲವು ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಮಹಿಳೆಗೆ ಐವರು ಮಕ್ಕಳಿದ್ದಾರೆ.
ಸಂತ್ರಸ್ತೆಯನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಶನಿವಾರ ರಾತ್ರಿ ಹೈದರಾಬಾದ್‌ನ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ, ಆರಂಭದಲ್ಲಿ ಅತ್ಯಾಚಾರ ಮತ್ತು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿತ್ತು. ಆದರೆ, ಮಹಿಳೆಯ ಸಾವಿನ ನಂತರ ಅದನ್ನು ಕೊಲೆ ಎಂದು ಬದಲಾಯಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ವರದಿಗಳ ಮೇರೆಗೆ, ಹೆಚ್ಚಿನ ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದರು.