ಬರ್ಧಮಾನ್: ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
"ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ. ಇದರೊಂದಿಗೆ ದೂರಿನ ಆಧಾರದ ಮೇಲೆ ಎಲ್ಲಾ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ" ಎಂದು ಅಸನ್ಸೋಲ್-ದುರ್ಗಾಪುರ ಪೊಲೀಸ್ ಕಮಿಷನರೇಟ್‌ನ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಅಭಿಶೇಖ್ ಗುಪ್ತಾ ಪಿಟಿಐಗೆ ತಿಳಿಸಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಮೂಲದ 23 ವರ್ಷದ ಯುವತಿ ಕಳೆದ ಶುಕ್ರವಾರ ರಾತ್ರಿ ಸ್ನೇಹಿತನೊಂದಿಗೆ ತಮ್ಮ ವೈದ್ಯಕೀಯ ಕಾಲೇಜಿನ ಹೊರಗೆ ಊಟಕ್ಕೆ ಹೋದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ವಿದ್ಯಾರ್ಥಿನಿ ಮೇಲೆ 'ಸಾಮೂಹಿಕ ಅತ್ಯಾಚಾರ'ದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಭಾನುವಾರ ಮೂವರನ್ನು ಬಂಧಿಸಲಾಗಿದ್ದು, ಇಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ.