ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲೆಯ ಖಾನಾಪುರ ಮಂಡಲ ವ್ಯಾಪ್ತಿಯ ಹಳ್ಳಿಯೊಂದರ ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ.
ಅಕ್ಟೋಬರ್ 25 ರಂದು ಈ ಘಟನೆ ನಡೆದಿದ್ದು, ಮಗುವಿನ ಕುಟುಂಬವು ಬಾಲಕಿಯ ನೋವುಗಳನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯ ತಾಯಿ ಗ್ರಾಮಕ್ಕೆ ಹಿಂತಿರುಗಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.
ಆರೋಪಿಯು ಅಂಗನವಾಡಿ ಸಂಘಟಕರ ಮಗ ಎಂದು ಖಾನಾಪುರ ಸಬ್-ಇನ್ಸ್‌ಪೆಕ್ಟರ್(ಎಸ್‌ಐ) ಸಿಎಚ್ ರಘುಪತಿ ಹೇಳಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಗುವನ್ನು ವೈದ್ಯಕೀಯ ಪರೀಕ್ಷೆ ಮತ್ತು ಸಮಾಲೋಚನೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಂಚಾಯತ್ ರಾಜ್ ಸಚಿವೆ ದಾನಸರಿ ಅನಸೂಯಾ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತೆಯ ಕುಟುಂಬಕ್ಕೆ ಸಂಪೂರ್ಣ ಬೆಂಬಲ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.