ಚುರಾಚಾಂದ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಂಬಂಧಿಸಿದಂತೆ ಹಾಕಲಾಗಿದ್ದ ಬ್ಯಾನರ್‌ಗಳು ಮತ್ತು ಕಟೌಟ್‌ಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಿರುವುದನ್ನು ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸಿದ ಉದ್ರಿಕ್ತ ಗುಂಪೊಂದು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದೆ.
ಸೆಪ್ಟೆಂಬರ್ 11 ರ ರಾತ್ರಿ, ಪಿಯರ್ಸನ್‌ಮುನ್ ಮತ್ತು ಫೈಲಿಯನ್ ಬಜಾರ್‌ನಲ್ಲಿ ಹಾಕಲಾಗಿದ್ದ ಹಲವಾರು ಬ್ಯಾನರ್‌ಗಳು ಮತ್ತು ಕಟೌಟ್‌ಗಳನ್ನು ಧ್ವಂಸಗೊಳಿಸಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ಹಲವು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ನಂತರ ಅವರೆಲ್ಲರನ್ನೂ ಬಿಡುಗಡೆ ಮಾಡಲಾಗಿದ್ದು, ಇಬ್ಬರು ಯುವಕರನ್ನು ಬಂಧಿಸಲಾಗಿದೆ.
ಈ ಇಬ್ಬರು ಯುವಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಗುಂಪೊಂದು ಚುರಾಚಂದ್‌ಪುರದ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಆರಂಭಿಸಿದೆ. ಪರಿಸ್ಥಿತಿ ಉದ್ರಿಕ್ತಗೊಳ್ಳುತ್ತಿದ್ದಂತೆಯೇ ಪ್ರತಿಭಟನಾಕಾರರು ಭದ್ರತಾ ಪಡೆಗಳತ್ತ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೇ 2023 ರಲ್ಲಿ ಕುಕಿಗಳು ಮತ್ತು ಮೈಟೀಸ್ ನಡುವೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಇದೇ ಮೊದಲ ಬಾರಿಗೆ ಶನಿವಾರ ಪ್ರಧಾನಿ ಮೋದಿ ಮಣಿಪುರ ರಾಜ್ಯಕ್ಕೆ ಭೇಟಿ ನೀಡಿದರು. ಅವರು ಚುರಾಚಾಂದ್‌ಪುರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಜ್ಯವನ್ನು 'ಶಾಂತಿಯ ಸಂಕೇತ'ವಾಗಿ ಮಾಡುವ ಭರವಸೆ ನೀಡಿದ್ದರು. ಜಿಲ್ಲೆಯಲ್ಲಿ ಹಿಂಸಾಚಾರದಿಂದ ಸಂತ್ರಸ್ತರಾದ ಜನರನ್ನು ಭೇಟಿ ಮಾಡಿದ ಅವರು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.