ಪಾಟ್ನಾ: 2025ರ ಬಿಹಾರ ವಿಧಾನಸಭಾ ಚುನಾವಣೆಯು ಮೋದಿ ಸರ್ಕಾರದ "ಭ್ರಷ್ಟ ಮತ್ತು ಅಸಮರ್ಥ ಆಡಳಿತದ ಅಂತ್ಯಕ್ಕೆ" ನಾಂದಿಯಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.
ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಬಿಹಾರದ ರಾಜಕೀಯ ಬೆಳವಣಿಗೆ ಕುರಿತು ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿದ್ದಾರೆ.
ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದಲ್ಲಿ ಬಿರುಕುಗಳು ಮೂಡುತ್ತಿದ್ದು, ಆಂತರಿಕ ಕಲಹ ಈಗಾಗಲೇ ಬಹಿರಂಗವಾಗಿದೆ ಎಂದು ಹೇಳಿದ್ದಾರೆ.
ಈ ಬಿರುಕಿಗೆ ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ನೋಡುತ್ತಿದೆ. ಬಿಹಾರ ಜನತೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿ, ಅಭಿವೃದ್ಧಿ ಪರ ಮತ ಹಾಕಲಿದ್ದಾರೆಂದು ತಿಳಿಸಿದರು.
ಇದೇ ವೇಳೆ ಪ್ರಧಾನಿ ಮೋದಿ ಮತ್ತು ಬಿಜೆಪಿ ನೇತೃತ್ವದ ಸರ್ಕಾರವನ್ನು ಟೀಕಿಸಿದ ಖರ್ಗೆ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ವಿಫಲಗೊಳಿಸಿದ್ದಾರೆಂದು ಆರೋಪಿಸಿದರು.
ಭಾರತವು ಹಲವು ಸವಾಲುಗಳನ್ನು ಎದುರಿಸುತ್ತಿದ್ದು, ರಾಜತಾಂತ್ರಿಕ ತಪ್ಪು ಹೆಜ್ಜೆಗಳು ಮೋದಿ ಆಡಳಿತದಲ್ಲಿ "ಆಡಳಿತದ ಸಂಪೂರ್ಣ ವೈಫಲ್ಯ"ವನ್ನು ಪ್ರತಿಬಿಂಬಿಸುತ್ತಿವೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನನ್ನ ಸ್ನೇಹಿತ ಎಂದು ಹೆಮ್ಮೆಯಿಂದ ಹೇಳುತ್ತಾರೆ. ಆದರೆ, ಅದೇ ಸ್ನೇಹಿತ ಇದೀಗ ಭಾರತಕ್ಕೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.
ಬಳಿಕ ಚುನಾವಣಾ ಆಯೋಗವನ್ನು ಟೀಕಿಸಿದ ಅವರು, ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.
"ಚುನಾವಣಾ ಆಯೋಗದ ನಡವಳಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಬಹು ರಾಜ್ಯಗಳಿಂದ ವರದಿಯಾದ ಮತ ಕಳ್ಳತನದ ಬಗ್ಗೆ ಆರೋಪಗಳು ಕೇಳಿ ಬರುತ್ತಿದೆ. ಆದರೆ, ಆಯೋಗವು ಈ ಕಳವಳಗಳನ್ನು ಪರಿಹರಿಸುವ ಬದಲು, ನಮ್ಮಿಂದ ಅಫಿಡವಿಟ್‌ಗಳನ್ನು ಕೇಳುತ್ತಿದೆ. ಇದು ಪ್ರಶ್ನಿಸುವವರನ್ನು ಮೌನಗೊಳಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿ ನಿರುದ್ಯೋಗ, ಸಾಮಾಜಿಕ ಧ್ರುವೀಕರಣ ಮತ್ತು ಸಾಂವಿಧಾನಿಕ ಸಂಸ್ಥೆಗಳ ವ್ಯವಸ್ಥಿತ ದುರ್ಬಲಗೊಳಿಸುವಿಕೆ ಹೆಚ್ಚುತ್ತಿದ್ದು, ಮೋದಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳನ್ನು ರಕ್ಷಿಸಲು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.