ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ 41 ಮಂದಿ ಮೃತಪಟ್ಟ ಕಾಲ್ತುಳಿತ ದುರ್ಘಟನೆ ಸಂಭವಿಸಿ ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಮತ್ತೊಂದು ದುರಂತ ಸಂಭವಿಸಿದೆ.
ಎನ್ನೋರ್ ಉಷ್ಣ ವಿದ್ಯುತ್ ಸ್ಥಾವರ ಘಟಕದೊಳಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಐವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಪ್ರಾಥಮಿಕ ವರದಿಯ ಪ್ರಕಾರ ಸುಮಾರು 30 ಅಡಿ ಎತ್ತರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಮಾನು ಕುಸಿದು ಈ ದುರಂತ ಸಂಭವಿಸಿದೆ. ಅವಶೇಷಗಳ ಅಡಿಯಲ್ಲಿ ಹಲವು ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಗಾಯಾಳುಗಳನ್ನು ಉತ್ತರ ಚೆನ್ನೈಯ ಸ್ಟಾನ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಅಸ್ಸಾಂ ಸುತ್ತಮುತ್ತಲಿನವರು ಎಂದು ತಮಿಳುನಾಡು ಜನರೇಷನ್ ಮತ್ತು ಡಿಸ್ಟ್ರಿಬ್ಯೂಷನ್ ಕಾರ್ಪೊರೇಷನ್ (TANGEDCO) ಅಧ್ಯಕ್ಷ ಡಾ ಜೆ ರಾಧಾಕೃಷ್ಣನ್ ತಿಳಿಸಿದ್ದಾರೆ. ಬಿಎಚ್ ಇಎಲ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಓರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಗೊಂಡ ವ್ಯಕ್ತಿಗಳನ್ನು ಉತ್ತರ ಚೆನ್ನೈನ ಸ್ಟಾನ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.