ನವದೆಹಲಿ: 2020 ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.
ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು. ಇಂದು ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಆದರೆ ಈ ಪ್ರಕರಣದಲ್ಲಿ ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ನೀಡಿದೆ.
ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪಾತ್ರಗಳು ಇತರರಿಗಿಂತ ಭಿನ್ನವಾಗಿವೆ. ಎಲ್ಲಾ ಆರೋಪಿಗಳ ಪಾತ್ರಗಳು ಒಂದೇ ಆಗಿಲ್ಲ ಎಂದು ದಾಖಲೆ ತೋರಿಸುತ್ತದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಗಳು ಬಲವಾಗಿವೆಯೇ ಎಂದು ನಾವು ಪರಿಶೀಲಿಸಬೇಕು. ಎಲ್ಲಾ ಆರೋಪಿಗಳ ಪಾತ್ರಗಳ ಕುರಿತು ಪ್ರಸ್ತುತಪಡಿಸಲಾದ ಸಂಗತಿಗಳನ್ನು ಸಹ ನಾವು ಪರಿಗಣಿಸಬೇಕು ಎಂದು ಪೀಠ ಹೇಳಿದೆ.
ಡಿಸೆಂಬರ್ 10 ರಂದು, ದೆಹಲಿ ಪೊಲೀಸರ ಪರವಾಗಿ ವಿಚಾರಣೆಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಮತ್ತು ಆರೋಪಿಗಳ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು ಸಿದ್ಧಾರ್ಥ್ ಲುತ್ರಾ ಅವರ ವಾದಗಳನ್ನು ಆಲಿಸಿದ ನಂತರ, ಸುಪ್ರೀಂ ಕೋರ್ಟ್ ಆರೋಪಿಗಳ ಪ್ರತ್ಯೇಕ ಅರ್ಜಿಗಳ ಮೇಲಿನ ತೀರ್ಪನ್ನು ಕಾಯ್ದಿರಿಸಿತು.
ಜಾಮೀನು ಅರ್ಜಿಗಳನ್ನು ಬಲವಾಗಿ ವಿರೋಧಿಸಿದ ದೆಹಲಿ ಪೊಲೀಸರು, ಫೆಬ್ರವರಿ 2020 ರ ಗಲಭೆ ಸ್ವಯಂಪ್ರೇರಿತವಲ್ಲ, ಬದಲಾಗಿ ಭಾರತದ ಸಾರ್ವಭೌಮತ್ವದ ಮೇಲೆ "ಸಂಯೋಜಿತ, ಪೂರ್ವ ಯೋಜಿತ ಮತ್ತು ಸಂಚು ರೂಪಿಸಲಾಗಿತ್ತು" ದಾಳಿ ಎಂದು ಹೇಳಿದ್ದರು.
ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.