ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 40 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ಹೋಗುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ಚಾಲಕನ ನಿಯಂತ್ರ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ.
ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಉಪವಿಭಾಗೀಯ ಮ್ಯಾಜಿಸ್ಟ್ರೇಟ್(ಎಸ್‌ಡಿಎಂ) ಸಂಗ್ರಾಹ್ ಸುನಿಲ್ ಕಾಯತ್ ಅವರು, ಅಪಘಾತದಲ್ಲಿ 9 ಜನ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿವೆ ಎಂದು ಹೇಳಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದವರ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಖಚಿತಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಪಘಾತದ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ರಸ್ತೆಯ ಮೇಲಿನ ಹಿಮದಿಂದಾಗಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ದೊಡ್ಡ ಜನಸಮೂಹ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದು, ಬಸ್ಸಿನ ಅವಶೇಷಗಳಿಂದ ಗಾಯಾಳುಗಳನ್ನು ಹೊರತೆಗೆಯಲು ಯತ್ನಿಸುತ್ತಿರುವುದು ಕಂಡುಬರುತ್ತದೆ.