ಕೋಲ್ಕತ್ತಾ: ಸದ್ಯ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಆತಂಕದಿಂದಾಗಿ ರಾಜ್ಯದಲ್ಲಿ ಪ್ರತಿದಿನ ಮೂರರಿಂದ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಇಲ್ಲಿನ ರೆಡ್ ರೋಡ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರವು ಈ ಸಾವುಗಳಿಗೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಪ್ರತಿಪಾದಿಸಿದರು.
'ಈಗಾಗಲೇ 110ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ಪ್ರತಿದಿನ ಮೂರರಿಂದ ನಾಲ್ಕು ಜನರು SIR ಆತಂಕದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ' ಎಂದು ಅವರು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿದೆ.
ಬಂಗಾಳದ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ ಬ್ಯಾನರ್ಜಿ, ದೇಶದ ಮಹಾನ್ ವ್ಯಕ್ತಿಗಳಾದ ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್, ಬೋಸ್ ಮತ್ತು ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಲಾಗುತ್ತಿದೆ ಎಂದು ದೂರಿದರು.