ಮುಂಬೈ: ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ನಿಧನರಾದ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸ್ಥಾನಕ್ಕೆ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ನಿರ್ಧರಿಸಿದೆ.
ಶನಿವಾರ ಮಧ್ಯಾಹ್ನ ಮುಂಬೈನಲ್ಲಿ ನಡೆಯುವ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.
ಆ ಬಳಿಕ ಅವರು ಉಪಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಮಂಡಿಸಲಿದ್ದು, ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆಂದು ತಿಳಿದುಬಂದಿದೆ.
ಅಜಿತ್ ಪವಾರ್ ವಹಿಸಿಕೊಂಡಿದ್ದ ಹಣಕಾಸು, ಅಬಕಾರಿ ಹಾಗೂ ಕ್ರೀಡಾ ಸೇರಿದಂತೆ ಪ್ರಮುಖ ಖಾತೆಗಳನ್ನು ಸುನೇತ್ರಾ ಪವಾರ್ ಅವರು ಮುಂದುವರೆಸಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.
ಶುಕ್ರವಾರ ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್, ರಾಜ್ಯಾಧ್ಯಕ್ಷ ಸುನಿಲ್ ತಟಕರೆ, ಸಚಿವ ಛಗನ್ ಭುಜಬಲ್ ಹಾಗೂ ಮಾಜಿ ಸಚಿವ ಧನಂಜಯ ಮುಂಡೆ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ ಈ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿದರು.
ಸುನೇತ್ರಾ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗುವುದು ಎಂದು ಅವರು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ, ಅಜಿತ್ ಪವಾರ್ ಉತ್ತರಾಧಿಕಾರ ಕುರಿತು ಪಕ್ಷದ ಶಾಸಕರ ಅಭಿಪ್ರಾಯಗಳನ್ನು ತಿಳಿಯಲು ನಾಯಕರು ದೂರವಾಣಿ ಮೂಲಕ ಸಂಪರ್ಕಿಸಿದ್ದು, ಸುನೇತ್ರಾ ಪವಾರ್ ಹಾಗೂ ಅವರ ಪುತ್ರರಾದ ಪಾರ್ಥ್ ಪವಾರ್ ಮತ್ತು ಜಯ ಪವಾರ್ ಅವರು ಶನಿವಾರದ ಸಭೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಎನ್‌ಸಿಪಿ ಎಂಎಲ್‌ಸಿ ಸಂಜಯ್ ಖೋದಕೆ ಅವರು ವಿಧಾನಸಭಾ ಕಾರ್ಯದರ್ಶಿಗೆ ಪತ್ರ ಬರೆದು, ವಿಧಾನಭವನದ ಹಾಲ್ ನಂಬರ್ 26ನ್ನು (50 ಆಸನ ಸಾಮರ್ಥ್ಯ) ಕಾಯ್ದಿರಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಶನಿವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.
ಸಭೆಯ ಬಳಿಕ ಮಾತನಾಡಿದ ಸುನಿಲ್ ತಟಕರೆ ಅವರು, ಪಕ್ಷವು ಶೋಕದಲ್ಲಿದೆ. ಮುಂದಿನ ಎಲ್ಲ ನಿರ್ಧಾರಗಳಿಗೂ ಮುನ್ನ ಪವಾರ್ ಕುಟುಂಬದೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.
ಇತ್ತ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಘಟಕ ಮತ್ತು ಅಜಿತ್ ಪವಾರ್ ಗುಂಪಿನ ನಡುವೆ ಮೈತ್ರಿ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ.
ಎರಡೂ ಗುಂಪುಗಳ ಏಕತೆ ಅಜಿತ್ ಪವಾರ್ ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ ಎಂದು ಶರದ್ ಪವಾರ್ ಬಣದ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಎನ್‌ಸಿಪಿ ರಾಜ್ಯಾಧ್ಯಕ್ಷ ಶಶಿಕಾಂತ್ ಶಿಂಡೆ ಅವರು ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ನಂತರ ಮೈತ್ರಿ ಕುರಿತ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಈ ಮಾತುಕತೆಗಳನ್ನು ಅಜಿತ್ ಪವಾರ್ ಸ್ವತಃ ಮುನ್ನಡೆಸಿದ್ದರು ಎಂದೂ ಅವರು ಹೇಳಿದ್ದಾರೆ.