ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣಾ ಆಯೋಗ ಆರಂಭಿಸಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾಚರಣೆಯಲ್ಲಿ ಈ ವರೆಗೂ ಬರೊಬ್ಬರಿ 22 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಮೂರನೇ ಹಂತದ ಪ್ರಕ್ರಿಯೆ ನಡೆಯುತ್ತಿರುವ ನಾಲ್ಕು ರಾಜ್ಯಗಳಲ್ಲಿ ಸುಮಾರು 22 ಲಕ್ಷ ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.
ಕಳೆದ ಕೆಲವು ದಿನಗಳಲ್ಲಿ ಮಿಜೋರಾಂ, ಒಡಿಶಾ, ಮಣಿಪುರ ಹಾಗೂ ಸಿಕ್ಕಿಂ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳು ಸಾರ್ವಜನಿಕ ವಲಯದಲ್ಲಿ ಪ್ರಕಟಿಸಿರುವ ಅಂಕಿಅಂಶಗಳ ಪ್ರಕಾರ, ಈ ನಾಲ್ಕು ರಾಜ್ಯಗಳ ಒಟ್ಟು ಮತದಾರರ ಸಂಖ್ಯೆಯಲ್ಲಿ ಸುಮಾರು 22 ಲಕ್ಷದಷ್ಟು ಕಡಿಮೆಯಾಗಿದೆ.
ಎಸ್‌ಐಆರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ ಈ ನಾಲ್ಕು ರಾಜ್ಯಗಳಲ್ಲಿ ಒಟ್ಟು 3.68 ಕೋಟಿ ಮತದಾರರು ಇದ್ದರು. ಆದರೆ ಕರಡು ಪಟ್ಟಿಯ ಪ್ರಕಾರ ಈಗ ಈ ಸಂಖ್ಯೆ 3.46 ಕೋಟಿಗೆ ಇಳಿಕೆಯಾಗಿದೆ. ಅದರಲ್ಲೂ ಒಡಿಶಾದಲ್ಲೇ ಗರಿಷ್ಠ 20.11 ಲಕ್ಷ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.
ಮಿಜೋರಾಂ, ಒಡಿಶಾ, ಮಣಿಪುರ ಮತ್ತು ಸಿಕ್ಕಿಂ ರಾಜ್ಯಗಳು ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ ಹಂತವಾಗಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿದೆ.
ಮತ್ತೊಂದು ಅವಕಾಶ
ಆದರೆ, ಕರಡು ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವವರಿಗೆ ಅಂತಿಮವಾಗಿ ಪ್ರಕಟವಾಗಲಿರುವ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳುವ ಅವಕಾಶ ಇನ್ನೂ ಇದೆ.
ಬಾಂಗ್ಲಾ, ಮ್ಯಾನ್ಮಾರ್ ಪ್ರಜೆಗಳು ಪತ್ತೆ!
ಇದೇ ವೇಳೆ, ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ, ಆಯೋಗದ ಅಧಿಕಾರಿಗಳು ನೆಲಮಟ್ಟದ ಪರಿಶೀಲನೆ ವೇಳೆ ಬಾಂಗ್ಲಾದೇಶ, ನೇಪಾಳ ಮತ್ತು ಮ್ಯಾನ್ಮಾರ್ ದೇಶಗಳ ಹಲವು ಪ್ರಜೆಗಳು ಬಿಹಾರದಲ್ಲಿ ಪತ್ತೆಯಾಗಿದ್ದಾರೆ ಎಂದು ಹೇಳಿಕೊಂಡಿದ್ದರು.