ಮುಂಬೈ: ಮುಂಬೈನ ಐತಿಹಾಸಿಕ ತಾಜ್ ಹೋಟೆಲ್‌ನಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಭಾನುವಾರ ಮುಂಜಾನೆ ಭದ್ರತಾ ಸಂಸ್ಥೆಗಳು ಭಾರೀ ಶೋಧ ಕಾರ್ಯಾಚರಣೆ ನಡೆಸಿದವು.
ಪೊಲೀಸರ ಮಾಹಿತಿ ಪ್ರಕಾರ, ತಡ ರಾತ್ರಿ 12.13ರ ಸುಮಾರಿಗೆ ನವಿ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ತಾಜ್ ಹೋಟೆಲ್‌ನಲ್ಲಿ ಬಾಂಬ್ ಇರಿಸಿದ್ದಾನೆ ಎಂದು ಹೇಳಿದ್ದ.
ಈ ಮಾಹಿತಿ ದೊರೆಯುತ್ತಿದ್ದಂತೆಯೇ ಮುಂಬೈ ಪೊಲೀಸರು, ಅಪರಾಧ ವಿಭಾಗ (ಕ್ರೈಂ ಬ್ರಾಂಚ್) ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDDS) ತಕ್ಷಣ ತಾಜ್ ಹೋಟೆಲ್‌ಗೆ ತೆರಳಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದವು.
ಹೋಟೆಲ್‌ನ ಎಲ್ಲಾ ಮಹಡಿಗಳು, ಸಾರ್ವಜನಿಕ ಸ್ಥಳಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಿ ಅತಿಥಿಗಳು, ಸಿಬ್ಬಂದಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲಾಯಿತು.
ಆದರೆ, ಸಂಪೂರ್ಣ ಪರಿಶೀಲನೆಯ ಬಳಿಕ ಯಾವುದೇ ಸ್ಫೋಟಕ, ಅನುಮಾನಾಸ್ಪದ ವಸ್ತು ಅಥವಾ ಬಾಂಬ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಈ ಬೆದರಿಕೆ ಕರೆ ಹುಸಿ (Hoax) ಎಂದು ಘೋಷಿಸಲಾಗಿದೆ.
ಮುಂಬೈ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, "ನವಿ ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‌ಗೆ ಬಂದ ಬೆದರಿಕೆ ಕರೆ ಹಿನ್ನೆಲೆಯಲ್ಲಿ ತಾಜ್ ಹೋಟೆಲ್‌ನಲ್ಲಿ ವ್ಯಾಪಕ ಶೋಧ ನಡೆಸಲಾಯಿತು. ಆದರೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ" ಎಂದು ತಿಳಿಸಿದ್ದಾರೆ.
ಇದೀಗ ಈ ಕರೆ ಮಾಡಿದ ವ್ಯಕ್ತಿಯನ್ನು ಪತ್ತೆಹಚ್ಚುವ ಕಾರ್ಯ ಆರಂಭವಾಗಿದ್ದು, ನವಿ ಮುಂಬೈನ ತುರ್ಭೆ ಪ್ರದೇಶದಿಂದ ಕರೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕರೆ ಮಾಡಿದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.