ನವದೆಹಲಿ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ವಿರೋಧಿಸಿ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಲೋಕ ಕಲ್ಯಾಣ ಮಾರ್ಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಬಲ ಪ್ರಯೋಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತಿತರ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಜಿತೇಂದ್ರ ಸಿಂಗ್ ಜೊತೆಗೆ ಮಾತುಕತೆ ವಿಫಲ: ಈ ಮಧ್ಯೆ ಪ್ರಧಾನ ಮಂತ್ರಿಯವರ ಕಚೇರಿಯ (PMO) ರಾಜ್ಯ ಸಚಿವ ಜಿತೇಂದ್ರ ಸಿಂಗ್, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರನ್ನು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಪ್ರಧಾನ ಮಂತ್ರಿಯವರ ನಿವಾಸದ ಹೊರಗೆ ನಡೆಯುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಆದರೆ, ಪ್ರತಿಭಟನೆ ಅಂತ್ಯಗೊಳಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ.
ನಿನ್ನೆ ಯುವ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಗಳ ಕುರಿತು ಪ್ರಧಾನಿ ಮೋದಿಯವರಿಂದ ಉತ್ತರ ಪಡೆಯಲು ಪ್ರಧಾನಿ ನಿವಾಸದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರ ಯಾವುದೇ ಹೊಣೆಗಾರಿಕೆಯನ್ನು ಹೊರಲು ಬಯಸುತ್ತಿಲ್ಲ ಅಥವಾ ಸಂಸತ್ತಿನಲ್ಲಿ ಈ ಕುರಿತು ಚರ್ಚೆ ನಡೆಸಲು ಇಚ್ಛಿಸುತ್ತಿಲ್ಲ. ಭಾರತದ ಯುವಜನತೆಯ ಭವಿಷ್ಯವನ್ನು ನಾಶಪಡಿಸಿರುವ ಕಾರಣಕ್ಕಾಗಿ ಪ್ರಧಾನಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಒತ್ತಾಯಿಸಿದ್ದಾರೆ.
ಪ್ರತಿಭಟನೆ ಹಿಂಪಡೆಯಬೇಕು ಎಂದು ಸರ್ಕಾರ ಬಯಸಿದ್ದೆ. ಆದರೆ ನಮ್ಮ ಬೇಡಿಕೆಗಳು ಈಡೇರದ ಕಾರಣ ನಾವು ಅದಕ್ಕೆ ಒಪ್ಪಲಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಮತ್ತು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂಬುದು ನಮ್ಮ ಆಗ್ರಹವಾಗಿದೆ. ನಮ್ಮ ಪ್ರತಿಭಟನೆಯಲ್ಲಿ ಇನ್ನೂ ಹೆಚ್ಚಿನ ಸಂಸದರು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾಮಾನ್ಯ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಸೈಯದ್ ನಾಸೀರ್ ಹುಸೇನ್ ಹೇಳಿದ್ದಾರೆ.
ಕಾಂಗ್ರೆಸ್ ನ ಆರು ಪ್ರಮುಖ ಬೇಡಿಕೆಗಳೇನು?
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಕುರಿತು ಸಂಸತ್ತಿನಲ್ಲಿ ವಿವರವಾದ ಚರ್ಚೆ.
ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಲಾಠಿ ಚಾರ್ಜ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು.
ಪೊಲೀಸ್ ಕ್ರಮದ ಬಗ್ಗೆ ಸ್ವತಂತ್ರ ತನಿಖೆ.
ಗಾಯಗೊಂಡ ಎಲ್ಲಾ ಪ್ರತಿಭಟನಾಕಾರರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ.
ಪೊಲೀಸ್ ಕ್ರಮದ ಸಮಯದಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಪರಿಹಾರ.