ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಬೇಕು ಎಂದು ಮತ್ತೊಮ್ಮೆ ಆಗ್ರಹಿಸಿದ್ದಾರೆ.
ಶನಿವಾರ ನವದೆಹಲಿಯ ತಮ್ಮ ನಿವಾಸದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೂರು ಪ್ರಮುಖ ಬೇಡಿಕೆಗಳು "ರಾಜಿಯಾಗದ ಬೇಡಿಕೆಗಳು" ಎಂದು ಹೇಳಿದರು.
ಧರ್ಮೇಂದ್ರ ಪ್ರಧಾನ್ ಭ್ರಷ್ಟ, ಅಸಮರ್ಥ ಹಾಗೂ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ವಿಫಲರಾಗಿದ್ದಾರೆ. ಅವರು ದೇಶದ ಅಮೂಲ್ಯ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವ ಪ್ರತೀಕವಾಗಿದ್ದು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲೇಬೇಕು ಎಂದು ಒತ್ತಾಯಿಸಿದರು.
ಪ್ರಧಾನ್ ಅವರನ್ನು ಬೇರೆ ಸಚಿವಾಲಯಕ್ಕೆ ವರ್ಗಾಯಿಸುವ ಕುರಿತು ಸರ್ಕಾರದೊಳಗೆ ಚರ್ಚೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಅಂತಹ ಕ್ರಮದಿಂದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಮಾಧಾನಗೊಳ್ಳುವುದಿಲ್ಲ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಡೀ ವ್ಯವಸ್ಥೆಯ ಮುಖ್ಯಸ್ಥರಾಗಿದ್ದು, ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು. ವಿದ್ಯಾರ್ಥಿಗಳೇ ದೇಶದ ಭವಿಷ್ಯ. ನರೇಂದ್ರ ಮೋದಿ ಭೂತಕಾಲ. ಭೂತಕಾಲ ಎಂದಿಗೂ ಭವಿಷ್ಯದ ವಿರುದ್ಧ ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಯಾವುದೇ ಒತ್ತಡದಿಂದ ಅಲ್ಲಿಂದ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ತಾವು ವಿದ್ಯಾರ್ಥಿಗಳಿಗೆ ಭರವಸೆ ನೀಡಿರುವುದಾಗಿ ತಿಳಿಸಿದರು.
ವಿದ್ಯಾರ್ಥಿಗಳು ಚಿಂತಿಸಬೇಕಿಲ್ಲ ಎಂದು ನಾನು ಹೇಳಿದ್ದೇನೆ. ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಬಹುದು, ಬೆದರಿಕೆ ಹಾಕಬಹುದು. ಆದರೆ, ವಿದ್ಯಾರ್ಥಿಗಳು ತಮ್ಮ ಹೋರಾಟದಿಂದ ಹಿಂದೆ ಸರಿಯುವುದಿಲ್ಲ" ಎಂದು ಹೇಳಿದರು.
ಇದೇ ವೇಳೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.
ಸಂಘಟನೆಯು ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವುದು, ನೀಟ್-ಯುಜಿ ಪ್ರಕರಣದ ಸಂತ್ರಸ್ತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡುವುದು ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಎಂಬ ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದು, ಇವುಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಶುಕ್ರವಾರ ಸಿಜೆಪಿ ನಿಯೋಗವನ್ನು ಭೇಟಿಯಾದ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು, ಸರ್ಕಾರದ ನಿಲುವನ್ನು ಶನಿವಾರ ತಿಳಿಸುವುದಾಗಿ ಹೇಳಿದ್ದರು.