ನವದೆಹಲಿ: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಯ ಬಳಿಕ, ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಭಾನುವಾರ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ, ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಅವರು ಈಗಾಗಲೇ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಶಿಕ್ಷಣ ಇಲಾಖೆಯನ್ನು ಹೆಚ್ಚುವರಿಯಾಗಿ ಹೆಚ್ಚುವರಿಯಾಗಿ ವಹಿಸಲಾಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ನಡೆದಿತ್ತು. ಈ ಬೆಳವಣಿಗೆಯ ನಡುವೆಯೇ ಶನಿವಾರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ತಮ್ಮ ರಾಜೀನಾಮೆ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್, "ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ. ಕಳೆದ ಹತ್ತು ದಿನಗಳಲ್ಲಿ ನಡೆದ ಬೆಳವಣಿಗೆಗಳ ಸರಣಿಯಿಂದ ನಾನು ತೀವ್ರವಾಗಿ ಮನನೊಂದಿದ್ದೇನೆ" ಎಂದು ಉಲ್ಲೇಖಿಸಿದ್ದರು. ಪ್ರಧಾನ್ ಅವರ ರಾಜೀನಾಮೆಯ ಬಳಿಕ ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಜವಾಬ್ದಾರಿ ನೀಡಿರುವುದು, ಕೇಂದ್ರ ಸರ್ಕಾರದ ಶಿಕ್ಷಣ ಕ್ಷೇತ್ರದ ಆಡಳಿತದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.
ಕರ್ನಾಟಕದ ಹಿರಿಯ ನಾಯಕ ಪ್ರಲ್ಹಾದ್ ಜೋಶಿ
1962ರ ನವೆಂಬರ್ 27ರಂದು ಕರ್ನಾಟಕದ ವಿಜಯಪುರದಲ್ಲಿ ಜನಿಸಿದ ಪ್ರಲ್ಹಾದ್ ಜೋಶಿ, ಹುಬ್ಬಳ್ಳಿಯಲ್ಲಿ ತಮ್ಮ ಶಾಲಾ ಶಿಕ್ಷಣ ಪೂರ್ಣಗೊಳಿಸಿದರು. ರೈಲ್ವೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಬಳಿಕ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ನಂತರ ಹುಬ್ಬಳ್ಳಿಯ ಶ್ರೀ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದರು.
ರಾಜಕೀಯಕ್ಕೆ ಪೂರ್ಣಾವಧಿಯಾಗಿ ಪ್ರವೇಶಿಸುವ ಮೊದಲು ಅವರು ಉದ್ಯಮ ಕ್ಷೇತ್ರದೊಂದಿಗೆ ಸಂಪರ್ಕ ಹೊಂದಿದ್ದರು. ಬಳಿಕ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಮುಖ ನಾಯಕರಾಗಿ ಹೊರಹೊಮ್ಮಿದ ಜೋಶಿ, 2004ರಿಂದ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಸತತ ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.
ಕೇಂದ್ರದಲ್ಲಿ ಹಲವು ಪ್ರಮುಖ ಸಚಿವ ಸ್ಥಾನಗಳ ಅನುಭವ
ಪ್ರಲ್ಹಾದ್ ಜೋಶಿ ಕೇಂದ್ರ ಸರ್ಕಾರದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2019ರಿಂದ 2024ರವರೆಗೆ ಅವರು ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆಗಳ ಕೇಂದ್ರ ಸಚಿವರಾಗಿದ್ದರು. 2024ರ ಲೋಕಸಭೆ ಚುನಾವಣೆಯ ಬಳಿಕ ಅವರಿಗೆ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಹಾಗೂ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯಗಳ ಜವಾಬ್ದಾರಿ ನೀಡಲಾಗಿತ್ತು.
ಹಸಿರು ಇಂಧನ ಯೋಜನೆಗಳಿಗೆ ಮುನ್ನಡೆ
ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾಗಿ ಪ್ರಲ್ಹಾದ್ ಜೋಶಿ, ಕೇಂದ್ರ ಸರ್ಕಾರದ ಹಲವು ಮಹತ್ವದ ಯೋಜನೆಗಳಿಗೆ ಮುನ್ನಡೆ ನೀಡಿದ್ದಾರೆ. ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್, ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ (PM Surya Ghar Muft Bijli Yojana), ಪಿಎಂ-ಕುಸುಮ್ (PM-KUSUM) ಸೇರಿದಂತೆ ಭಾರತದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯ ವಿಸ್ತರಣೆಗೆ ಸಂಬಂಧಿಸಿದ ಹಲವು ಯೋಜನೆಗಳ ಅನುಷ್ಠಾನದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸಿಕೊಂಡಿರುವ ಪ್ರಲ್ಹಾದ್ ಜೋಶಿ, ಶಿಕ್ಷಣ ಕ್ಷೇತ್ರದಲ್ಲಿನ ಸವಾಲುಗಳನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ಈಗ ರಾಷ್ಟ್ರದ ಗಮನ ಸೆಳೆದಿದೆ.