ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗಳ ವಿರುದ್ಧದ ಪ್ರಕರಣಗಳನ್ನು ದೆಹಲಿ ಬಿಜೆಪಿ ಸರ್ಕಾರ ಹಿಂಪಡೆದಿದೆ. ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ. ಆದರೆ ಕ್ರಿಮಿನಲ್ ಹಿನ್ನೆಲೆಯುಳ್ಳವರು ಕ್ರಮ ಎದುರಿಸಬೇಕಾಗುತ್ತದೆ ಎಂದು ದೆಹಲಿ ಸರ್ಕಾರದ ಆದೇಶ ತಿಳಿಸಿದೆ.
ಪ್ರತಿಭಟನೆ ವೇಳೆ ದಾಖಲಾದ ಪ್ರಕರಣಗಳಲ್ಲಿ ಈಗಾಗಲೇ ಬಂಧಿತರಾಗಿರುವವರನ್ನು ಪರಿಶೀಲಿಸಿ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ದೆಹಲಿ ಗೃಹ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
"ದೆಹಲಿಯ NCT ಸರ್ಕಾರವು ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಯಾವುದೇ ಪ್ರತಿಕೂಲ ಕ್ರಮ ಕೈಗೊಳ್ಳಲು ಉದ್ದೇಶಿಸಿಲ್ಲ ಮತ್ತು ಈ ಕಾರಣದಿಂದಾಗಿ ಮುಂದೆ ಯಾವುದೇ ವಿಚಾರಣೆಗಳಿಲ್ಲದೆ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ" ಎಂದು ಗೃಹ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
ಈ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ದೆಹಲಿ NCT ಯೊಳಗಿನ ಯಾವುದೇ ಪೊಲೀಸ್ ಅಧಿಕಾರಿಗಳು, ಯಾವುದೇ ಪ್ರತಿಕೂಲ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಆದೇಶ ತಿಳಿಸಿದೆ.
ಆದಾಗ್ಯೂ, ಸುಪ್ರೀಂ ಕೋರ್ಟ್‌ನ ಇತ್ತೀಚಿನ ಆದೇಶದಲ್ಲಿ ಸೂಚಿಸಿದಂತೆ, ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿರುವ ವ್ಯಕ್ತಿಗಳಿಗೆ ಈ ರಕ್ಷಣೆ ವಿಸ್ತರಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜುಲೈ 20 ರಂದು ಕಾಕ್ರೋಚ್ ಜನತಾ ಪಕ್ಷ ನಡೆಸಿದ 'ಚಲೋ ಸಂಸತ್' ಪ್ರತಿಭಟನಾ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 13 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.