ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳ ವಿರುದ್ಧ ಧ್ವನಿ ಎತ್ತುತ್ತಿರುವ ದೇಶದ ಯುವ ಪೀಳಿಗೆಯನ್ನು (Gen Z) ಎಫ್‌ಐಆರ್ ಮತ್ತು ಪೊಲೀಸ್ ಬಲದ ಮೂಲಕ ಹೆದರಿಸಲು ಸಾಧ್ಯವಿಲ್ಲ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಮೋದಿ ಮತ್ತು ಶಾ ಜೋಡಿಯನ್ನು "ಭಾರತದ ಗತಕಾಲ" ಎಂದು ಕರೆದಿದ್ದು, ದೇಶದ ಯುವಕರೇ "ಭಾರತದ ಭವಿಷ್ಯ" ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವುದು ಹಾಗೂ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆಗೆದುಹಾಕುವ ಮೂಲಕ ಜೆನ್ Z (Gen Z) ಯುವಜನರನ್ನು ಮೌನಗೊಳಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ.
ಆದರೆ, ಜೆನ್ Z ಅನ್ನು ಬೆದರಿಸಿ ಮೌನಗೊಳಿಸಲು ಸಾಧ್ಯವಿಲ್ಲ. ಮೊದಲು ಅವರ ಮೂಳೆ ಮುರಿದಿರಿ. ಈಗ ಅವರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದೀರಿ, ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆಗೆದುಹಾಕುತ್ತಿದ್ದೀರಿ. ನೀವು ಭಾರತದ ಭೂತಕಾಲ. ಭಾರತದ ಭವಿಷ್ಯವನ್ನು ಹೇಗೆ ನಡೆಸಿಕೊಳ್ಳುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಬರೆದಿದ್ದಾರೆ.
ಪ್ರಧಾನಿ ಮೋದಿ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಅಗತ್ಯವಿದೆ ಎಂದು ಗುರುವಾರ ಹೇಳಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಯಾವುದೇ ರೀತಿಯ ಸಡಿಲಿಕೆ ಇರುವುದಿಲ್ಲ ಎಂದು ಘೋಷಿಸಿದ್ದರು.
ಕಳೆದ ಹಲವು ವರ್ಷಗಳಿಂದ ಕೇಂದ್ರ ಹಾಗೂ ಅನೇಕ ರಾಜ್ಯ ಸರ್ಕಾರಗಳು ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆಯನ್ನು ಎದುರಿಸುತ್ತಿವೆ. ಈ ಅಕ್ರಮದಿಂದ ವಿವಿಧ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಭವಿಷ್ಯ ಅಪಾಯಕ್ಕೆ ಸಿಲುಕಿದೆ. ಆದ್ದರಿಂದ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸುಧಾರಣೆ ಅಗತ್ಯವಾಗಿದೆ ಎಂದು ಹೇಳಿದ್ದರು.
ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ತಡೆ) ತಿದ್ದುಪಡಿ ಕಾಯ್ದೆಯ ಉಲ್ಲೇಖ ಮಾಡಿದ್ದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಜಾಲ, ಮಾಫಿಯಾ ಹಾಗೂ ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಯಾರನ್ನೂ ಸರ್ಕಾರ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರಶ್ನೆಪತ್ರಿಕೆ ಸೋರಿಕೆ ನಡೆಸುವ ಗ್ಯಾಂಗ್‌ಗಳು, ಮಾಫಿಯಾ ಹಾಗೂ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವವರ ವಿರುದ್ಧ ಯಾವುದೇ ದಯೆ ತೋರಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದರು.
ಇದರ ಜೊತೆಗೆ, ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ, ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ ಹಾಗೂ ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ವಿಶ್ವಾಸಾರ್ಹಗೊಳಿಸಲು ರಾಜ್ಯಗಳೊಂದಿಗೆ ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿಸಿದ್ದರು.
ಗುರುವಾರ ಸಂಸತ್ತಿನ ಉಭಯ ಸದನಗಳು ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ತಡೆ) ತಿದ್ದುಪಡಿ ಮಸೂದೆ–2026 ಅನ್ನು ಅಂಗೀಕರಿಸಿವೆ. ಈ ಮಸೂದೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಶಿಕ್ಷೆಯ ಅವಕಾಶ ಕಲ್ಪಿಸಲಾಗಿದೆ. ರಾಜ್ಯಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಹಲವು ಪಕ್ಷಗಳು ಸಭಾತ್ಯಾಗ ಮಾಡಿದ ಬಳಿಕ, ಧ್ವನಿಮತದ ಮೂಲಕ ಮಸೂದೆಗೆ ಅನುಮೋದನೆ ನೀಡಲಾಯಿತು.