ನವದೆಹಲಿ: ನೈರುತ್ಯ ಮುಂಗಾರು ಕೇರಳಕ್ಕೆ ಆಗಮಿಸಿದೆ. ಅದರ ಪ್ರಭಾವ ಈಗಾಗಲೇ ಎಲ್ಲ ಕಡೆ ಗೋಚರಿಸುತ್ತಿದೆ. ಜೂನ್ 11 ರವರೆಗೆ ಅಂದರೆ ಮುಂದಿನ ಏಳು ದಿನ ಕೇರಳ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡಿನಲ್ಲಿಯೂ ಸಹ ತೀವ್ರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ನೈರುತ್ಯ ಮುಂಗಾರು ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿನ ನಿವಾಸಿಗಳು ಜಾಗರೂಕರಾಗಿರಬೇಕು ಎಂದು IMD ಎಚ್ಚರಿಕೆ ನೀಡಿದೆ.
ಶುಕ್ರವಾರ ಕೇರಳದ ಅನೇಕ ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ರಾಜ್ಯದ ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಕಾಸರಗೋಡು, ಕಣ್ಣೂರು, ವೈನಾಡು ಸೇರಿದಂತೆ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಕರ್ನಾಟಕ ಹೆಚ್ಚಿನ ಸ್ಥಳಗಳಲ್ಲಿ,ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಅನೇಕ ಕಡೆಗಳಲ್ಲಿ ಮಳೆಯಾಗಿದೆ. ಹೊನ್ನಾವರದಲ್ಲಿ ಅತಿ ಹೆಚ್ಚು 9 ಸೆಂಟಿ ಮೀಟರ್ ಮಳೆಯಾಗಿದೆ. ಕಾರವಾರ, ಮಂಕಿಯಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ.
ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ನಗರ, ಗ್ರಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿ ಸಹಿತ 30-40 ಕಿ ಮೀ ವೇಗದಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ ಏಳು ದಿನ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.