ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಇಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶೀಘ್ರದಲ್ಲೇ ಶ್ವೇತಭವನಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಆಹ್ವಾನ ನೀಡಿದ್ದಾರೆ.
ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಜಿಯೊ ಗೊರ್ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ವಿಷಯವನ್ನು ದೃಢಪಡಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಗೊರ್, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪರವಾಗಿ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಪ್ರಧಾನಿ ಮೋದಿಗೆ ಶೀಘ್ರದಲ್ಲೇ ವೈಟ್ ಹೌಸ್‌ಗೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ ಎಂದು ಬರೆದಿದ್ದಾರೆ.
ಎರಡೂ ದೇಶಗಳ ರಕ್ಷಣಾ, ತಂತ್ರಜ್ಞಾನ, ವ್ಯಾಪಾರ ಮತ್ತು ಹೂಡಿಕೆ, ಇಂಧನ ಭದ್ರತೆ, ಸಂಪರ್ಕ, ಶಿಕ್ಷಣ ಹಾಗೂ ಜನರ ನಡುವಿನ ಬಾಂಧವ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ನಿರಂತರವಾಗಿ ಪ್ರಗತಿಸುತ್ತಿರುವ ಬಗ್ಗೆ ಕಾರ್ಯದರ್ಶಿ ರೂಬಿಯೊ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ (PMO) ಹೇಳಿಕೆಯಲ್ಲಿ ತಿಳಿಸಿದೆ.
ಅಲ್ಲದೆ, ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಚಾರಗಳ ಕುರಿತು ಅಮೆರಿಕದ ದೃಷ್ಟಿಕೋನವನ್ನು ರೂಬಿಯೊ ಹಂಚಿಕೊಂಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಪ್ರಧಾನಿ ಮೋದಿ ಅವರು ಶಾಂತಿ ಪ್ರಯತ್ನಗಳಿಗೆ ಭಾರತದ ನಿರಂತರ ಬೆಂಬಲವನ್ನು ಪುನರುಚ್ಚರಿಸಿದ್ದು, ಸಂವಾದ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಸಂಘರ್ಷಗಳನ್ನು ಶಾಂತಿಯುತವಾಗಿ ಪರಿಹರಿಸುವ ಅಗತ್ಯವಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.