ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಬುಧವಾರ ಗುಂಡಿನ ದಾಳಿ ನಡೆದಿದೆ.
ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ ಸುಮಾರು 2.15ರ ವೇಳೆಗೆ ಮಿರ್ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಅಲ್ಲಿ ನಾಕಾ ಕರ್ತವ್ಯದಲ್ಲಿದ್ದ ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಅವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಮೂವರು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಅನಂತ್ನಾಗ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಆರ್ಪಿಎಫ್ ತಿಳಿಸಿದೆ.
ಘಟನೆ ನಡೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿಕೋರರ ಪತ್ತೆಗಾಗಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಿವೆ. ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.