ಲಖನೌ: ಉತ್ತರ ಪ್ರದೇಶದಲ್ಲಿ ಮತ್ತೊಂದು ಪೊಲೀಸ್ ಎನ್ಕೌಂಟರ್ ನಡೆದಿದ್ದು, 35ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕುಖ್ಯಾತ ಗ್ಯಾಂಗ್ ಸ್ಟರ್ ವಹೀದ್ ಅನ್ಸಾರಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.
ಮಂಗಳವಾರ ಪೊಲೀಸರು ವಾಡಿಕೆಯ ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ವಹೀದ್ ಅನ್ಸಾರಿ ಮತ್ತು ಆತನ ಸಹಚರ ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಠಾಣಾಧಿಕಾರಿ (ಎಸ್‌ಎಚ್‌ಒ) ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ ತಿಳಿಸಿದ್ದಾರೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೈಕ್‌ನಲ್ಲಿದ್ದ ಆರೋಪಿಗಳನ್ನು ಸುತ್ತುವರಿದಿದ್ದಾರೆ. ಈ ವೇಳೆ ಒಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಮತ್ತೊಬ್ಬ ಆರೋಪಿ ಪೊಲೀಸರ ಪ್ರತಿದಾಳಿಯಲ್ಲಿ ಗಾಯಗೊಂಡಿದ್ದಾನೆ.
ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪ್ರಾಚಿ ಸಿಂಗ್ ಹೇಳಿದ್ದಾರೆ.
ಮೃತನನ್ನು ಘಾಜಿಪುರ ನಿವಾಸಿ ವಹೀದ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ದರೋಡೆ, ಕೊಲೆ, ಸುಲಿಗೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಗ್ಯಾಂಗ್‌ಸ್ಟರ್ ಕಾಯ್ದೆ ಸೇರಿದಂತೆ ಒಟ್ಟು 35 ಪ್ರಕರಣಗಳು ದಾಖಲಾಗಿದ್ದವು.
ವಹೀದ್ ಅನ್ಸಾರಿ ಬಿಟ್ಟು ಇಂದೋರಿ ಗ್ಯಾಂಗ್‌ನ ಸಕ್ರಿಯ ಸದಸ್ಯನಾಗಿದ್ದ. ಬಹುಕಾಲದಿಂದ ಸುಪಾರಿ ಕೊಲೆ ಪ್ರಕರಣಗಳಲ್ಲೂ ಭಾಗಿಯಾಗಿದ್ದ ಎಂದು ಎಸ್‌ಪಿ ತಿಳಿಸಿದ್ದಾರೆ. ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.