ರಿಯಾದ್ ಟವರ್ ಮೇಲೆ ಹೌತಿ ಬಂಡುಕೋರರ ದಾಳಿ: ಇಬ್ಬರು ಭಾರತೀಯರು ಸೇರಿ 11 ಮಂದಿ ಗಾಯ; ಭಾರತ ತೀವ್ರ ಖಂಡನೆ
ಸೌದಿ ಅರೇಬಿಯಾದ ನಾಗರಿಕ, ಆರ್ಥಿಕ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿದೇಶಾಂಗ ಸಚಿವಾಲಯ ಆಗ್ರಹಿಸಿದೆ. ಇದೇ ವೇಳೆ, ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯ ನಡುವೆಯೂ ಸೌದಿ ಅರೇಬಿಯಾಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದೆ.
ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಗೋಪುರವೊಂದರ ಮೇಲೆ ಹೌತಿ ಬಂಡುಕೋರರು ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ ಇಬ್ಬರು ಭಾರತೀಯರು ಸೇರಿದಂತೆ 11 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.
ಸೌದಿ ಅರೇಬಿಯಾದ ನಾಗರಿಕ, ಆರ್ಥಿಕ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿದೇಶಾಂಗ ಸಚಿವಾಲಯ ಆಗ್ರಹಿಸಿದೆ. ಇದೇ ವೇಳೆ, ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯ ನಡುವೆಯೂ ಸೌದಿ ಅರೇಬಿಯಾಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನಿನ್ನೆ ಮಂಗಳವಾರ ರಿಯಾದ್‌ನ ಕಿಂಗ್ ಅಬ್ದುಲ್ಲಾ ಹಣಕಾಸು ಜಿಲ್ಲೆ (KAFD)ಯಲ್ಲಿರುವ ಪಿಐಎಫ್ ಟವರ್ ಮೇಲೆ ನಡೆದ ದಾಳಿ ಹಾಗೂ ಸೌದಿ ಅರೇಬಿಯಾ ಸಾಮ್ರಾಜ್ಯದ ನಾಗರಿಕ, ಆರ್ಥಿಕ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಯುತ್ತಿರುವ ದಾಳಿಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದೆ.
ದಾಳಿಯಲ್ಲಿ ಇಬ್ಬರು ಭಾರತೀಯರು ಗಾಯಗೊಂಡಿರುವುದನ್ನು ದೃಢಪಡಿಸಿರುವ ಸಚಿವಾಲಯ, ಗಾಯಾಳುಗಳು ಮತ್ತು ಅವರ ಕುಟುಂಬಗಳಿಗೆ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ತಿಳಿಸಿದೆ.
ರಿಯಾದ್ ವಾಣಿಜ್ಯ ಚಟುವಟಿಕೆಯ ಕೇಂದ್ರ ಜಿಲ್ಲೆಯ ಮೇಲಿನ ದಾಳಿಯಲ್ಲಿ ಇಬ್ಬರು ಭಾರತೀಯರು ಗಾಯಗೊಂಡಿದ್ದಾರೆ. ಗಾಯಾಳುಗಳು ಮತ್ತು ಅವರ ಕುಟುಂಬಗಳಿಗೆ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಧ್ಯವಿರುವ ಎಲ್ಲ ನೆರವು ಒದಗಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇಂತಹ ದಾಳಿಗಳು ನಾಗರಿಕರ ಜೀವಕ್ಕೆ ಅಪಾಯ ತಂದೊಡ್ಡುವುದಲ್ಲದೆ, ಸೌದಿ ಅರೇಬಿಯಾದ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತವೆ ಹಾಗೂ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಗೆ ಧಕ್ಕೆ ಉಂಟುಮಾಡುತ್ತವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಈ ದಾಳಿಗಳು ನಾಗರಿಕರ ಜೀವಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತವೆ, ಸೌದಿ ಅರೇಬಿಯಾದ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತವೆ ಮತ್ತು ಪ್ರಾದೇಶಿಕ ಭದ್ರತೆ ಹಾಗೂ ಸ್ಥಿರತೆಯನ್ನು ದುರ್ಬಲಗೊಳಿಸುತ್ತವೆ. ಇಂತಹ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ನಾವು ಆಗ್ರಹಿಸುತ್ತೇವೆ ಎಂದು ಹೇಳಿದೆ.
ರಿಯಾದ್‌ಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿರುವ ಸಚಿವಾಲಯ, ಸೌದಿ ಅರೇಬಿಯಾ ಸಾಮ್ರಾಜ್ಯದ ಜನತೆ ಮತ್ತು ಸರ್ಕಾರದೊಂದಿಗೆ ನಮ್ಮ ದೃಢವಾದ ಒಗ್ಗಟ್ಟನ್ನು ಮತ್ತೊಮ್ಮೆ ವ್ಯಕ್ತಪಡಿಸುತ್ತೇವೆ. ತನ್ನ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಹಾಗೂ ನಾಗರಿಕರು ಮತ್ತು ನಿವಾಸಿಗಳ ಭದ್ರತೆ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವಲ್ಲಿ ಆ ಸಾಮ್ರಾಜ್ಯಕ್ಕೆ ನಮ್ಮ ಅಚಲ ಬೆಂಬಲವನ್ನು ಪುನರುಚ್ಚರಿಸುತ್ತೇವೆ. ಈ ಪ್ರದೇಶದಲ್ಲಿ ಆದಷ್ಟು ಶೀಘ್ರ ಶಾಂತಿ ಮತ್ತು ಸಹಜ ಸ್ಥಿತಿ ಮರಳಲಿದೆ ಎಂದು ಪ್ರಾಮಾಣಿಕವಾಗಿ ಆಶಿಸುತ್ತೇವೆ ಎಂದು ತಿಳಿಸಿದೆ.