'ಮೈತ್ರಿ ಮಾಡ್ಕೊಳ್ಳೋಣ ಬನ್ನಿ'; ಬಿಜೆಪಿ-ಅಕಾಲಿದಳ ಬೆನ್ನಲ್ಲೇ 2027ರ ಪಂಜಾಬ್ ಚುನಾವಣೆಗಾಗಿ ದೋಸ್ತಿಗೆ ಬಾಗಿಲು ತೆರೆದ ಕಾಂಗ್ರೆಸ್, CPI-CPM ಜೊತೆ ಮಾತುಕತೆ!
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಸಿಪಿಐ ಮತ್ತು ಸಿಪಿಎಂ ಸೇರಿದಂತೆ ಇತರ ಪಕ್ಷಗಳೊಂದಿಗೆ ಚುನಾವಣಾ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಸಬಹುದು..
ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಚುನಾವಣಾ ಮೈತ್ರಿಯ ಸಾಧ್ಯತೆಗಳನ್ನು ಮುಕ್ತವಾಗಿರಿಸಿದೆ.
ರಾಜ್ಯದಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಪರಗತ್ ಸಿಂಗ್ ಬುಧವಾರ ಹೇಳಿದ್ದಾರೆ. ಮೈತ್ರಿ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಸಿಪಿಐ ಮತ್ತು ಸಿಪಿಎಂ ಸೇರಿದಂತೆ ಇತರ ಪಕ್ಷಗಳೊಂದಿಗೆ ಚುನಾವಣಾ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಸಬಹುದು ಎಂದು ಅವರು ತಿಳಿಸಿದ್ದಾರೆ.
ಆದರೆ, ಕಾಂಗ್ರೆಸ್ ಯಾವುದೇ ಮೈತ್ರಿ ಮಾಡಿಕೊಂಡರೂ ಎಲ್ಲ ಕ್ಷೇತ್ರಗಳಲ್ಲಿ ಪೂರ್ಣ ಶಕ್ತಿಯೊಂದಿಗೆ ಸ್ಪರ್ಧಿಸಲು ಸಿದ್ಧವಾಗಿದೆ. ಮುಂಬರುವ ಚುನಾವಣೆಯಲ್ಲಿ ಗೆದ್ದು ಪಂಜಾಬ್‌ನಲ್ಲಿ ಮತ್ತೆ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದು ಪರಗತ್ ಸಿಂಗ್ ಹೇಳಿದ್ದಾರೆ.
ಯುವ ನಾಯಕರಿಗೆ ಟಿಕೆಟ್!
ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿಯೂ ಪರಗತ್ ಸಿಂಗ್ ಮಾತನಾಡಿದ್ದಾರೆ. ಪಕ್ಷವು ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲಿದೆ. ಅದರಲ್ಲೂ ಉತ್ತಮ ವರ್ಚಸ್ಸು ಹೊಂದಿರುವ ಮತ್ತು ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯವಿರುವ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.
ಮಾಜಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು 60ರಿಂದ 70 ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಬಗ್ಗೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಗತ್ ಸಿಂಗ್, ಯುವಕರನ್ನು ಪ್ರೋತ್ಸಾಹಿಸುವುದು ಪಕ್ಷದ ಉದ್ದೇಶ. ಆದರೆ ನಿರ್ದಿಷ್ಟ ಸಂಖ್ಯೆಯ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ-ಅಕಾಲಿದಳ ಮೈತ್ರಿಗೆ ಚರಣ್‌ಜಿತ್ ಸಿಂಗ್ ಚನ್ನಿ ಟೀಕೆ
ಇತ್ತೀಚೆಗೆ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಒಂದಾಗಿರುವುದನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. ಈ ಮೈತ್ರಿಯ ಹಿಂದೆ ರಾಜಕೀಯ ಅನಿವಾರ್ಯತೆ ಇದೆಯೇ ಹೊರತು ಸೈದ್ಧಾಂತಿಕ ಒಗ್ಗಟ್ಟಿಲ್ಲ ಎಂದು ಆರೋಪಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಚರಣ್‌ಜಿತ್ ಸಿಂಗ್ ಚನ್ನಿ, ಬಿಜೆಪಿ ಮತ್ತು ಅಕಾಲಿದಳ ಆರು ವರ್ಷಗಳ ಹಿಂದೆ ಮೈತ್ರಿ ಮುರಿದುಕೊಳ್ಳಲು ಕಾರಣವಾಗಿದ್ದ ಸಮಸ್ಯೆಗಳು ಈಗ ಬಗೆಹರಿದಿವೆಯೇ ಎಂದು ಪ್ರಶ್ನಿಸಿದ್ದಾರೆ.
ವಿಶೇಷವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳು ಮತ್ತು ರೈತರ ಪ್ರತಿಭಟನೆಯ ವಿಚಾರದಲ್ಲಿ ಎರಡೂ ಪಕ್ಷಗಳ ನಿಲುವು ಬದಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಅಕಾಲಿದಳದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗಿದ್ದು, ಹಲವು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಬಿಜೆಪಿ-ಅಕಾಲಿದಳದ ಹೊಸ ಮೈತ್ರಿಯಿಂದ ಪಂಜಾಬ್ ಜನರು ಅಸಮಾಧಾನಗೊಂಡಿದ್ದಾರೆ ಎಂದು ಚನ್ನಿ ಆರೋಪಿಸಿದ್ದಾರೆ.
ಬಿಜೆಪಿ ಪಂಜಾಬ್‌ನಲ್ಲಿ ಅಲ್ಪಸಂಖ್ಯಾತರನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಈ ಮೈತ್ರಿ ರಾಜ್ಯಕ್ಕೆ ಅಪಾಯಕಾರಿ ಎಂದು ಹೇಳಿದ್ದಾರೆ.
ಅಲ್ಲದೆ, ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸುಖ್‌ಬೀರ್ ಸಿಂಗ್ ಬಾದಲ್ ಅವರನ್ನು ಬಿಂಬಿಸುವ ಚರ್ಚೆಗಳ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ. ರೈತರ ಪ್ರತಿಭಟನೆಯ ಸಂದರ್ಭದಲ್ಲಿ 750ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ
ವಿರೋಧ ಪಕ್ಷದ ನಾಯಕರ ಮೇಲೆ ರಾಜಕೀಯ ಒತ್ತಡ ಹೇರಲು ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಚನ್ನಿ ಆರೋಪಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ, ಪ್ರಸ್ತುತ ಜಾರಿಯಲ್ಲಿರುವ ಜನಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಅವುಗಳನ್ನು ಮುಂದುವರಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.