ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಸೇರಿದಂತೆ ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ಮುನ್ನ ಪೊಲೀಸರು ಕೈಗೊಂಡಿರುವ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳು ಮತ್ತಷ್ಟು ತೀವ್ರಗೊಂಡಿವೆ.
ಪಕ್ಷವು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಸಿಜೆಪಿ ನಾಯಕರು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಐಜಿಐ) ವಿಮಾನದಲ್ಲಿ ಬಂದಿಳಿದ ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಮುನ್ನ, ಯೂಟ್ಯೂಬರ್ ಧ್ರುವ್ ರಾಠಿಯನ್ನು ದೆಹಲಿ ಪೊಲೀಸರು ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಜೆಪಿ, “ಧ್ರುವ್ ರಾಠಿಯನ್ನು ತಕ್ಷಣ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದೆ.
ನಿನ್ನೆ ಸಂಜೆ ರಾಠಿ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೊವೊಂದನ್ನು ಪ್ರಕಟಿಸಿ, ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಟೀಕಾಕಾರರೆಂದೇ ಗುರುತಿಸಿಕೊಂಡಿರುವ ರಾಠಿ, ಈ ವಾರದ ಆರಂಭದಲ್ಲಿ ಜರ್ಮನಿಯಿಂದ ಭಾರತಕ್ಕೆ ಆಗಮಿಸಿದ್ದರು. ಮೊನ್ನೆ 8ರಂದು ಬೆಂಗಳೂರಿನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯಲ್ಲಿಯೂ ಅವರು ಪಾಲ್ಗೊಂಡಿದ್ದರು.
ರಾಠಿ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಪಾರ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ 1.92 ಕೋಟಿ, ಎಕ್ಸ್‌ನಲ್ಲಿ 33 ಲಕ್ಷ ಹಾಗೂ ಯೂಟ್ಯೂಬ್‌ನಲ್ಲಿ 3.3 ಕೋಟಿ ಚಂದಾದಾರರನ್ನು ಹೊಂದಿದ್ದಾರೆ.
ಭದ್ರತಾ ಕಾರಣಗಳು ಮತ್ತು ಕಾರ್ಯವಿಧಾನಕ್ಕೆ ಸಂಬಂಧಿಸಿದ ಅಗತ್ಯತೆಗಳನ್ನು ಉಲ್ಲೇಖಿಸಿ, ಈ ವಾರದ ಆರಂಭದಲ್ಲಿ ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು.
ಪ್ರತಿಭಟನಾಕಾರರು ಪ್ರತಿಭಟನಾ ಸ್ಥಳವನ್ನು ತಲುಪುವುದನ್ನು ತಡೆಯಲು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆಯುವ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದಾರೆ. ಅಲ್ಲದೆ, ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.
ದೆಹಲಿಯ ಹೃದಯಭಾಗದಲ್ಲಿ ಇಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಮುನ್ನ, ರಾತ್ರೋರಾತ್ರಿ 400ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ನೂರಾರು ರೈಲುಗಳ ಸಂಚಾರ ರದ್ದುಗೊಳಿಸಲಾಗಿದ್ದು, ಹಲವು ಮೆಟ್ರೋ ನಿಲ್ದಾಣಗಳನ್ನೂ ಮುಚ್ಚಲಾಗಿದೆ.
ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸಿಜೆಪಿ ತನ್ನ ಬೆಂಬಲಿಗರನ್ನು ಸಂಘಟಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರವು ಪೊಲೀಸ್ ಇಲಾಖೆ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 20,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿದೆ.
ಸಂವಿಧಾನದ ಹೆಸರಿನಲ್ಲಿ ಸುಳ್ಳುಗಳನ್ನು ಹರಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಸವಾಲೊಡ್ಡಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಆರೋಪಿಸಿದ್ದಾರೆ. ಸತತ ಚುನಾವಣಾ ಸೋಲುಗಳಿಂದ ಪ್ರತಿಪಕ್ಷಗಳು ಹತಾಶಗೊಂಡಿವೆ ಎಂದು ಅವರು ಹೇಳಿದ್ದಾರೆ.
ಇಂತಹ ಪ್ರಯತ್ನಗಳಿಗೆ ಬಿಜೆಪಿ ಮತ್ತು “ದೇಶಭಕ್ತ ನಾಗರಿಕರು” ತಕ್ಕ ಹಾಗೂ ಕಠಿಣ ಪ್ರತ್ಯುತ್ತರ ನೀಡಲಿದ್ದಾರೆ ಎಂದು ನಬಿನ್ ಎಚ್ಚರಿಸಿದ್ದಾರೆ.
ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸುವ ಪ್ರಯತ್ನಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಬಿಜೆಪಿ ಕಾರ್ಯಕರ್ತರು ಕೂಡ ನೆಲಮಟ್ಟದಲ್ಲಿ ಇಂತಹ ಪ್ರಯತ್ನಗಳನ್ನು ಎದುರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ ಸಾಧಿಸುವುದು ಮತ್ತು ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸುವುದು ಬಿಜೆಪಿಯ ಬದ್ಧತೆಯಾಗಿದೆ ಎಂದು ನಬಿನ್ ಹೇಳಿದ್ದಾರೆ. ದೇಶದ ಶಾಂತಿಗೆ ಭಂಗ ತರುವ ದೇಶೀಯ ಅಥವಾ ವಿದೇಶಿ ಶಕ್ತಿಗಳ ವಿರುದ್ಧ ಪಕ್ಷ ದೃಢವಾಗಿ ನಿಲ್ಲಲಿದೆ ಎಂದೂ ಅವರು ತಿಳಿಸಿದ್ದಾರೆ.