ಕೋಟಾ (ರಾಜಸ್ಥಾನ): ರಾಜಸ್ಥಾನದ ಕೋಟಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು 8 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ಬಸ್ ಭೋಪಾಲ್ನಿಂದ ಖಾಟು ಶ್ಯಾಮ್ ದೇವಸ್ಥಾನದತ್ತ ಹೊರಟಿತ್ತು. ಈ ನಡುವೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಎಂ.ಬಿ.ಎಸ್. ಆಸ್ಪತ್ರೆ ಮತ್ತು ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬೆನ್ನಲ್ಲೇ ಜಿಲ್ಲಾಧಿಕಾರಿ ಪಿಯೂಷ್ ಸಮಾರಿಯಾ ಮತ್ತು ಐಜಿ ಹರೇಂದ್ರ ಮಹಾವರ್ ಅವರು ಎಂ.ಬಿ.ಎಸ್. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಮೃತಪಟ್ಟ ಎಂಟು ಮಂದಿಯ ಪೈಕಿ ಐವರು ಮಹಿಳೆಯರಾಗಿದ್ದಾರೆ. ಮೃತರನ್ನು ಅರುಣಾ, ವೈಷ್ಣವಿ, ತ್ರಿಶಾ, ಕೃಷ್ಣಾ, ಅನಿತಾ, ಓಂ, ಸೂರ್ಯವಂಶಿ ಮತ್ತು ರಾಜು ಎಂದು ಮೃತರನ್ನು ಗುರುತಿಸಲಾಗಿದೆ. ಘಟನೆ ಕುರಿತು ಬೆಳಗ್ಗೆ ಸುಮಾರು 8 ಗಂಟೆಗೆ ಮಾಹಿತಿ ಲಭಿಸಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಳು ಮಂದಿಯನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಹೇಳಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕ ನಿದ್ರೆಗೆ ಜಾರಿದ್ದರಿಂದ ಬಸ್ ನಿಯಂತ್ರಣ ತಪ್ಪಿದೆ. ಬಳಿಕ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದನ್ನು ಮುರಿದು ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಗಾಯಾಳುಗಳನ್ನು ತ್ವರಿತವಾಗಿ ಆಸ್ಪತ್ರೆಗೆ ಸಾಗಿಸಲು ಲಭ್ಯವಿದ್ದ ನಾಲ್ಕೂ ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು. ಗಾಯಗೊಂಡವರು ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ನಲ್ಲಿ ಒಟ್ಟು 27 ಪ್ರಯಾಣಿಕರಿದ್ದರು. ಇವರೆಲ್ಲರೂ ಭೋಪಾಲ್ನಿಂದ ಖಾಟು ಶ್ಯಾಮ್ಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗೆಹ್ಲೋಟ್ ಸಂತಾಪ
ಈ ನಡುವೆ ದುರ್ಘಟನೆಗೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಂಟು ಮಂದಿ ಮೃತಪಟ್ಟಿರುವ ಸುದ್ದಿ “ಅತ್ಯಂತ ದುಃಖಕರ ಮತ್ತು ಹೃದಯವಿದ್ರಾವಕ” ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕೋಟಾ ಜಿಲ್ಲೆಯ ಸಿಮಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೋಪಾಲ್ನಿಂದ ಖಾಟು ಶ್ಯಾಮ್ಜಿಗೆ ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾಗಿ ಹಲವು ಮಂದಿ ಮೃತಪಟ್ಟಿರುವ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ ಎಂದು ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ಆಳವಾದ ಸಂತಾಪ ಸೂಚಿಸಿರುವ ಅವರು, ಈ ಕಷ್ಟದ ಸಮಯವನ್ನು ಎದುರಿಸುವ ಶಕ್ತಿಯನ್ನು ದೇವರು ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.