ಸೌರವ್ ದಾಸ್ 
ದೇಶ

ನ್ಯಾಯಾಂಗ ನಿಂದನೆ ಆರೋಪ: CJP ನಾಯಕ ಸೌರವ್ ದಾಸ್ ಹಿನ್ನೆಲೆ ಕುರಿತು ತನಿಖೆ, passport-Aadhaar card ರದ್ದು ಕೋರಿ PIL; ಕೇಂದ್ರ ಸರ್ಕಾರಕ್ಕೆ Madras ಹೈಕೋರ್ಟ್ ನೋಟಿಸ್..!

ಸೌರವ್ ದಾಸ್ ಅವರು ನ್ಯಾಯಾಂಗ, ಭಾರತದ ಮುಖ್ಯ ನ್ಯಾಯಮೂರ್ತಿ ಹಾಗೂ ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಚೆನ್ನೈ: ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕ ಸೌರವ್ ದಾಸ್ ಅವರ ಹಿನ್ನೆಲೆ ಕುರಿತು ತನಿಖೆ ನಡೆಸಬೇಕು ಮತ್ತು ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್, ಸೌರವ್ ದಾಸ್ ಮತ್ತು ಕೇಂದ್ರ ಸರ್ಕಾರದ ಗೃಹ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ಮೊದಲ ನ್ಯಾಯಪೀಠ, ಶುಕ್ರವಾರ ಚೆನ್ನೈನ ಜಮೀನ್ ಪಲ್ಲಾವರಂ ನಿವಾಸಿ ಆರ್. ಗಣೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.

ಸೌರವ್ ದಾಸ್ ಅವರು ನ್ಯಾಯಾಂಗ, ಭಾರತದ ಮುಖ್ಯ ನ್ಯಾಯಮೂರ್ತಿ ಹಾಗೂ ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಯೋಗೇಶ್ ಶರ್ಮಾ ಅಲಿಯಾಸ್ ಸೌರವ್ ದಾಸ್ ಮತ್ತು ಅವರ ಕುಟುಂಬದ ಹಿನ್ನೆಲೆ ಹಾಗೂ ವಿವರಗಳ ಕುರಿತು ಸಮಗ್ರ, ನಿಷ್ಪಕ್ಷಪಾತ ಮತ್ತು ಸಂಪೂರ್ಣ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಇದೇ ವೇಳೆ ಪುದುಚೇರಿಯಲ್ಲಿ ವಾಸಿಸುತ್ತಿದ್ದಾರೆ ಎನ್ನಲಾದ ಅವರ ತಾಯಿ ಸೀಮ್ ಛೆಟ್ರಿ ಮತ್ತು ತಂದೆ ಬಿಜಯ್ ಶರ್ಮಾ ಅವರ ಬಗ್ಗೆಯೂ ತನಿಖೆ ನಡೆಸುವಂತೆಯೂ ಮನವಿ ಮಾಡಿದ್ದಾರೆ.

ತನಿಖೆಯಲ್ಲಿ ಸೌರವ್ ದಾಸ್ ತಪ್ಪಿತಸ್ಥರೆಂದು ಕಂಡುಬಂದರೆ ಅವರ ಪಾಸ್‌ಪೋರ್ಟ್ ಮತ್ತು ಆಧಾರ್ ಕಾರ್ಡ್ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದೂ ಅರ್ಜಿದಾರರು ಕೋರಿದ್ದಾರೆ. ಅಲ್ಲದೆ, ಎಕ್ಸ್‌ ಮತ್ತು ಇನ್‌ಸ್ಟಾಗ್ರಾಂನಲ್ಲಿರುವ ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಿ, ಮುಂದಿನ ದಿನಗಳಲ್ಲಿ ಇಂತಹ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಅಕ್ಟೋಬರ್ 7ರಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ವಾದ ಆಲಿಸಿದ ನ್ಯಾಯಾಲಯ, ಸೌರವ್ ದಾಸ್ ಮತ್ತು ಕೇಂದ್ರ ಸರ್ಕಾರದ ಗೃಹ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಆರು ವಾರಗಳಲ್ಲಿ ಉತ್ತರಿಸುವಂತೆ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭೂತಾನ್‌ನಲ್ಲಿ ಹಿಮನದಿ ಸ್ಫೋಟ: ಭಾರತದ ಗಡಿ ರಾಜ್ಯಗಳಲ್ಲಿ ದಿಢೀರ್ ಪ್ರವಾಹ ಭೀತಿ, ಬಂಗಾಳ-ಅಸ್ಸಾಂನಲ್ಲಿ ಹೈ ಅಲರ್ಟ್ ಘೋಷಣೆ

ನಟ ಧನ್ವೀರ್‌ಗೆ ಹೆಚ್ಚಿದ ಸಂಕಷ್ಟ: ಮೂರು ಠಾಣೆಗಳಲ್ಲಿ ಎಫ್‌ಐಆರ್ ದಾಖಲು, ವಿಚಾರಣೆಗೆ ಹಾಜರಾಗಲು ಪೊಲೀಸರ ನೋಟಿಸ್

ಅಮೆರಿಕದ ನಾರ್ತ್ ಡಕೋಟಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ!

CEC ಜ್ಞಾನೇಶ್ ಕುಮಾರ್ ವಿರುದ್ಧ INDIA ಒಕ್ಕೂಟ ಹೊಸ ಅಸ್ತ್ರ; ‘ಸಾರ್ವಜನಿಕ ದೋಷಾರೋಪಣೆ’ಗೆ ಸಜ್ಜು; ಇಂದು ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ

ನೀರಿಗೇ ರೂ.30-35 ಕೊಡ್ತೀರಿ, ಹಾಲಿನ ಬೆಲೆ ಹೆಚ್ಚಾದರೆ ವಿರೋಧವೇಕೆ?: ದರ ಏರಿಕೆ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್