ಸಾಗರ್: ಮಧ್ಯಪ್ರದೇಶದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮಧ್ಯ ಸೇವಿಸಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ.
ಹೌದು.. ಕಳ್ಳಭಟ್ಟಿ ಮದ್ಯ ಸೇವಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 54 ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಪ್ರಾಥಮಿಕ ತನಿಖೆಯಲ್ಲಿ ಈ ಅಕ್ರಮ ಮದ್ಯವನ್ನು ನೆರೆಯ ಉತ್ತರ ಪ್ರದೇಶದ ಲಲಿತ್‌ಪುರದಿಂದ ಪೂರೈಕೆ ಮಾಡಿರುವ ಸಾಧ್ಯತೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೂವರು ಅಬಕಾರಿ ಅಧಿಕಾರಿಗಳು ಹಾಗೂ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಂತ್ರಸ್ತರ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಸಾಗರ್ ವಲಯದ ಡಿಐಜಿ ಶಶೀಂದ್ರ ಚೌಹಾಣ್ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಬಾಂಡಾ ತಹಸಿಲ್‌ನ ಎರಡು ಗ್ರಾಮಗಳಲ್ಲಿ ಅಕ್ರಮ ಕಳ್ಳಭಟ್ಟಿ ಮದ್ಯ ಸೇವಿಸಿದ ಬಳಿಕ 11 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಡಿಐಜಿ ಚೌಹಾಣ್ ಅವರು ದೂರವಾಣಿ ಮೂಲಕ ತಿಳಿಸಿದ್ದಾರೆ.
ಅಸ್ವಸ್ಥಗೊಂಡಿರುವ 54 ಮಂದಿಯಲ್ಲಿ 49 ಜನರಿಗೆ ದೃಷ್ಟಿ ಮಂಜಾಗುವುದು, ತಲೆಸುತ್ತು ಸೇರಿದಂತೆ ವಿವಿಧ ಲಕ್ಷಣಗಳು ಕಂಡುಬಂದಿವೆ ಎಂದು ಅವರು ತಿಳಿಸಿದ್ದಾರೆ.
ಅಸ್ವಸ್ಥರನ್ನು ತಪಾಸಣೆಗೊಳಪಡಿಸಿ ಬುಂದೇಲ್‌ಖಂಡ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ (BMCH)ಗೆ ದಾಖಲಿಸಲಾಗಿದೆ. ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆ ಹೊಂದಿರುವವರನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಡಿಐಜಿ ತಿಳಿಸಿದ್ದಾರೆ.
ಕಳ್ಳಭಟ್ಟಿ ಮದ್ಯ ಸೇವಿಸಿರುವ ಸಾಧ್ಯತೆ ಇರುವ ಇತರರಿಗಾಗಿ ಪೊಲೀಸರು ಬೆಳಗ್ಗೆಯಿಂದಲೇ ಪೀಡಿತ ಗ್ರಾಮಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಚೌಹಾಣ್ ಹೇಳಿದ್ದಾರೆ.
ಉತ್ತರ ಪ್ರದೇಶದಿಂದ ಪೂರೈಕೆ ಶಂಕೆ
ಈ ಪ್ರಕರಣದಲ್ಲಿ ಬಾಂಡಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಓರ್ವ ಪೊಲೀಸ್ ಹೊರಠಾಣೆ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ.
ಬಾಂಡಾ ಸೇರಿದಂತೆ ಎರಡು ಪೊಲೀಸ್ ಠಾಣೆಗಳಲ್ಲಿ ಸಂತ್ರಸ್ತರ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಕ್ರಮ ಮದ್ಯದ ಮೂಲ ಹಾಗೂ ಅದರ ಪೂರೈಕೆ ಜಾಲದ ಬಗ್ಗೆ ತನಿಖೆ ಮುಂದುವರಿದಿದ್ದು, ಉತ್ತರ ಪ್ರದೇಶದ ಲಲಿತ್‌ಪುರದಿಂದ ಮದ್ಯ ಪೂರೈಕೆಯಾಗಿದೆಯೇ ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.