ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮುಖ್ಯ ಚುನಾವಣಾ ಆಯುಕ್ತರ ಮೇಲೆ ಒತ್ತಡ ಹೇರುತ್ತಿರುವ ಪ್ರಧಾನಿ ಮೋದಿ ಅವರು ತಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸ್ವತಂತ್ರ ಸಂಸ್ಥೆಯಾಗಿದ್ದ ಚುನಾವಣಾ ಆಯೋಗವನ್ನು ಆಡಳಿತಾರೂಢ ಬಿಜೆಪಿ ಸರ್ಕಾರದ "ಕೈಗೊಂಬೆ"ಯನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ ಜ್ಞಾನೇಶ್ ಕುಮಾರ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪಕ್ಷದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳಿದರು.
ಈ ವಿಷಯದ ಕುರಿತು ಬೀದಿಗಿಳಿದು ಹೋರಾಟ ನಡೆಸುವುದರ ಜತೆಗೆ ಸಂಸತ್ತಿನಲ್ಲೂ ಮತದಾರರ ಪಟ್ಟಿ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಧ್ವನಿ ಎತ್ತುವುದಾಗಿ ತಿಳಿಸಿದರು.
ಇದೇ ವೇಳೆ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟ ಅವರು, ಮತದಾರರ ಪಟ್ಟಿಯಲ್ಲಿ ಮಾಡಲಾಗಿರುವ ಬದಲಾವಣೆಗಳಿಗೆ ಸಂಬಂಧಿಸಿದ ಎಲ್ಲ ದತ್ತಾಂಶವನ್ನು ಬಹಿರಂಗಪಡಿಸಬೇಕು, ಪಟ್ಟಿಯಿಂದ ಹೆಸರು ತೆಗೆದುಹಾಕಲಾಗಿರುವ ಮತದಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಹಾಗೂ ಎಲ್ಲ ರಾಜಕೀಯ ಪಕ್ಷಗಳಿಗೆ ನಿಗದಿತ ಸಮಯದೊಳಗೆ ಸರಳ ಸ್ವರೂಪದಲ್ಲಿ ಮತದಾರರ ಪಟ್ಟಿಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಗಂಭೀರ ಅಸಂಗತತೆಗಳು ಕಂಡುಬರುವ ಕಡೆಗಳಲ್ಲಿ ಸ್ವತಂತ್ರ ಹಾಗೂ ಕಾಲಮಿತಿಯ ತನಿಖೆ ನಡೆಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು ಮತ್ತು ಯಾವುದೇ ಮಾಹಿತಿಯನ್ನು ಮುಚ್ಚಿಡಲಾಗುತ್ತಿದೆ ಎಂಬ ಭಾವನೆ ಮೂಡಬಾರದು.
ಇಬ್ಬರು ಚುನಾವಣಾ ಆಯುಕ್ತರೇ ಸಿಇಸಿ ಅವರ ಕೆಲವು ಕ್ರಮಗಳನ್ನು ‘ಸ್ವೇಚ್ಛಾಚಾರ ಮತ್ತು ಅಸಮಂಜಸ’ ಎಂದು ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹುದ್ದೆಯಲ್ಲಿ ಮುಂದುವರಿಯುವ ಹಕ್ಕು ಹೊಂದಿಲ್ಲ, ಅವರನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.
ಇದರ ಜತೆಗೆ, ಸಿಇಸಿ ಮೇಲೆ ‘ಒತ್ತಡ ಹೇರಿದ’ ಆರೋಪದ ಹಿನ್ನೆಲೆಯಲ್ಲಿ ಪ್ರಧಾನಿ ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಖರ್ಗೆ ಆಗ್ರಹಿಸಿದರು.
ಎಸ್‌ಐಆರ್ ಪ್ರಕ್ರಿಯೆಯ ಕೆಲವು ಅಂಶಗಳು, ಫಾರ್ಮ್-6ರಲ್ಲಿ ಮಾಡಲಾದ ಬದಲಾವಣೆಗಳು, ಮತದಾರರ ಪಟ್ಟಿಗೆ ಹೆಸರುಗಳ ಸೇರ್ಪಡೆ-ತೆಗೆದುಹಾಕುವಿಕೆ ಹಾಗೂ ಮತದಾರರ ಪಟ್ಟಿಯ ದತ್ತಾಂಶದ ನಿಯಂತ್ರಣ ಕುರಿತು ಚುನಾವಣಾ ಆಯೋಗದೊಳಗೆ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ನಡುವೆಯೇ ಖರ್ಗೆ ಈ ಹೇಳಿಕೆ ನೀಡಿದ್ದಾರೆ.
‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಪ್ರಕಾರ, ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಎಸ್‌ಐಆರ್‌ಗೆ ಸಂಬಂಧಿಸಿದ ಕೆಲವು ನಿರ್ಧಾರಗಳು ಮತ್ತು ಆದೇಶಗಳ ಕುರಿತು 10 ತಿಂಗಳಲ್ಲಿ ಕನಿಷ್ಠ 14 ಬಾರಿ ಆಕ್ಷೇಪ ದಾಖಲಿಸಿದ್ದರು. ಈ ನಿರ್ಧಾರಗಳು ತಮ್ಮ ಅರಿವು ಅಥವಾ ಶಿಫಾರಸಿಲ್ಲದೆ ಹೊರಬಂದಿದ್ದವು ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಆದರೆ, ಚುನಾವಣಾ ಆಯೋಗವು ತನ್ನೊಳಗೆ ಯಾವುದೇ ಬಿರುಕು ಇದೆ ಎಂಬ ವರದಿಗಳನ್ನು ತಳ್ಳಿಹಾಕಿದೆ. ಬಹುಸದಸ್ಯ ಆಯೋಗದಲ್ಲಿ ಚರ್ಚೆಯ ವೇಳೆ ಭಿನ್ನ ಅಭಿಪ್ರಾಯಗಳು ಮತ್ತು ಅಭಿಪ್ರಾಯ ಸೂಚನೆಗಳು ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿದ್ದು, ಆಯೋಗದ ಆದೇಶಗಳಿಗೆ ಸಂಪೂರ್ಣ ಕಾನೂನು ಮಾನ್ಯತೆ ಇದೆ ಎಂದು ಸ್ಪಷ್ಟಪಡಿಸಿದೆ. ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಆಯೋಗ ಹೇಳಿದೆ.
ಇದರ ಬೆನ್ನಲ್ಲೇ ಎಸ್‌ಐಆರ್‌ಗೆ ಸಂಬಂಧಿಸಿದ ಇತ್ತೀಚಿನ ಕ್ರಮಗಳು ಈ ಪ್ರಕ್ರಿಯೆಯಲ್ಲಿನ ಗಂಭೀರ ಲೋಪಗಳನ್ನು ಒಪ್ಪಿಕೊಂಡಂತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಹೆಸರುಗಳನ್ನು ಕಳೆದುಕೊಂಡಿರುವ ಅಥವಾ ಕಳೆದುಕೊಳ್ಳುವ ಅಪಾಯದಲ್ಲಿರುವ ಮತದಾರರಿಗೆ ಕೈಗೊಳ್ಳಲಾಗುತ್ತಿರುವ ‘ತುಂಡು-ತುಂಡು’ ಕ್ರಮಗಳು, ಪಕ್ಷದ ಪ್ರಕಾರ, ದೊಡ್ಡ ಪ್ರಮಾಣದ ಮತದಾರರ ಹಕ್ಕು ಕಸಿಯುವಿಕೆಯ ಸಮಸ್ಯೆಯನ್ನು ಪರಿಹರಿಸಲು ಸಾಕಾಗುವುದಿಲ್ಲ.
“ಮತದಾರರ ಪಟ್ಟಿಯಲ್ಲಿ ಪಾರದರ್ಶಕತೆ ಇರಬೇಕು, ಚುನಾವಣಾ ಪ್ರಕ್ರಿಯೆ ನಿಷ್ಪಕ್ಷಪಾತವಾಗಿರಬೇಕು. ಸಂಸ್ಥೆಗಳು ಸ್ವತಂತ್ರವಾಗಿರಬೇಕು ಮತ್ತು ಪ್ರತಿಯೊಬ್ಬ ಭಾರತೀಯನ ಮತವನ್ನು ರಕ್ಷಿಸಬೇಕು” ಎಂದು ಖರ್ಗೆ ಹೇಳಿದ್ದಾರೆ.
ಇದು ಸಂವಿಧಾನದ ‘ಮೂಲ ಆಶಯ’ ಹಾಗೂ ಪ್ರಜಾಪ್ರಭುತ್ವದ ‘ಆತ್ಮ’ ಎಂದು ಹೇಳಿದ ಖರ್ಗೆ, ಕಾಂಗ್ರೆಸ್ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವುದಿಲ್ಲ. ಈ ವಿಷಯವನ್ನು ಬೀದಿಗಳಿಂದ ಸಂಸತ್ತಿನವರೆಗೆ ತೆಗೆದುಕೊಂಡು ಹೋಗುವುದಾಗಿ ತಿಳಿಸಿದ್ದಾರೆ.
ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ನಿರಂತರವಾಗಿ ಆರೋಪಗಳನ್ನು ಮಾಡುತ್ತಿರುವ ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ಖರ್ಗೆ ಧನ್ಯವಾದ ತಿಳಿಸಿದ್ದಾರೆ.
ಎಸ್‌ಐಆರ್ ವಿಚಾರದಲ್ಲಿ ಇತರ ವಿರೋಧ ಪಕ್ಷಗಳೊಂದಿಗೆ ಜಂಟಿ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಜಂಟಿ ಕಾರ್ಯತಂತ್ರ ರೂಪಿಸಲು ಇಂಡಿಯಾ ಮೈತ್ರಿಕೂಟದ ನಾಯಕರು ಬುಧವಾರ ಸಭೆ ಸೇರಲಿದ್ದಾರೆ. ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯೂ ಸಭೆಯ ಪ್ರಮುಖ ವಿಚಾರವಾಗಲಿದೆ.