ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ: ಎಚ್‌ಡಿಕೆ

Parashurama
Updated On : 17 Feb 2013, 9:43 am

ಗದಗ: ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಶೇಕಡಾವಾರು ಮತ ಗಳಿಕೆಯಲ್ಲಿ ಜೆಡಿಎಸ್ ದ್ವಿತೀಯ ಸ್ಥಾನ ಪಡೆದಿತ್ತು. ಈ ಬಾರಿ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಆಡಳಿತ, ಭ್ರಷ್ಟಾಚಾರದಿಂದ ಜನರು ಬೇಸತ್ತಿದ್ದಾರೆ. ಹೀಗಾಗಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪ್ರಥಮ ಸ್ಥಾನ ಪಡೆಯುವ ಮೂಲಕ ಎಲ್ಲೆಡೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ಅತೃಪ್ತರನ್ನು ಸೆಳೆಯಲ್ಲ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ನಲ್ಲಿ ಸಾಕಷ್ಟು ಅತೃಪ್ತರಿದ್ದು, ಅವರನ್ನು ಜೆಡಿಎಸ್ ಸೆಳೆಯುತ್ತಿದೆ ಎನ್ನುವ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅಂಥ ಅವಶ್ಯಕತೆ ಜೆಡಿಎಸ್‌ಗಿಲ್ಲ. ನಮ್ಮ ಪಕ್ಷದಲ್ಲಿಯೇ ಸಾಕಷ್ಟು ನಿಷ್ಠಾವಂತ ಕಾರ್ಯಕರ್ತರಿದ್ದು, ಅನ್ಯ ಪಕ್ಷದ ಅತೃಪ್ತರ ಬಗ್ಗೆ ಜೆಡಿಎಸ್ ಎಂದೂ ಯೋಚಿಸಿಲ್ಲ. ಪಕ್ಷವನ್ನು ಗ್ರಾಮ ಮಟ್ಟದಲ್ಲಿ ಕಟ್ಟಿದ ಕಾರ್ಯಕರ್ತರಿಗೆ ಆದ್ಯತೆ ಸಿಗಲಿದೆ ಎಂದರು.
ಶೀಘ್ರದಲ್ಲಿಯೇ ಅಂತಿಮ ಪಟ್ಟಿ: ಜೆಡಿಎಸ್ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಿದ್ದು, 224 ಸ್ಥಾನಗಳಲ್ಲಿ 30 ರಿಂದ 40 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಅದು ಪೂರ್ಣಗೊಂಡ ತಕ್ಷಣವೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ಅಭ್ಯರ್ಥಿ ಆಯ್ಕೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement