ವಿಶ್ವಾಸ ಮತ ಸಾಬೀತಿಗೆ ಸಿದ್ಧ: ಸಚಿವ ಜಾರಕಿಹೊಳಿ
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಹೀಗಾಗಿ ವಿಧಾನಸಭೆ ವಿಸರ್ಜಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಗತ್ಯ ಬಿದ್ದರೆ ವಿಶ್ವಾಸ ಮತ ಸಾಬೀತುಪಡಿಸುತ್ತೇವೆ ಎಂದು ಪೌರಾಡಳಿತ ಖಾತೆ ಸಚಿವ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಹೇಳಲಾಗುತ್ತಿದ್ದರೂ ಈಗಲೂ ಪ್ರತಿಪಕ್ಷಗಳ ಒಟ್ಟಾರೆ ಬಲಕ್ಕೆ ಹೋಲಿಸಿದರೆ ಬಿಜೆಪಿ ಸಂಖ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ಜನ ಶಾಸಕರು ರಾಜಿನಾಮೆ ನೀಡುತ್ತಾರೆ ಎಂಬ
ಅನುಮಾನ ಇದ್ದರೂ ಅದು ವಾಸ್ತವವಾಗುವುದಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಸರ್ಕಾರಕ್ಕೆ ಯಾವುದೇ ಕಂಟಕ ಇಲ್ಲ ಎಂದು ಸುದ್ದಿಗಾರರಿಗೆ ಮಂಗಳವಾರ ತಿಳಿಸಿದರು. ಬಿಜೆಪಿ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಅದನ್ನು ನಿವಾರಿಸುವತ್ತ ಪಕ್ಷ ಸೂಕ್ತ ಕ್ರಮ ಕೈಗೊಂಡಿದೆ. ಕೆಲವು ಶಾಸಕರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗುವುದು ಅನುಮಾನ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರೇ ಇದನ್ನು ಸ್ಪಷ್ಟಪಡಿಸಿದ್ದು, ಹಾಲಿ ಎಲ್ಲ ಶಾಸಕರಿಗೂ ಟಿಕೆಟ್ ನೀಡಲಾಗುತ್ತದೆ ಎಂದರು.
ಕೆಲವು ಕ್ಷೇತ್ರಗಳಲ್ಲಿ ಈಗಿರುವ ಶಾಸಕರಿಗೆ ಟಿಕೆಟ್ ನೀಡಲು ಸಾಕಷ್ಟು ವಿರೋಧವಿದೆ. ಅದೇನೇ ಇದ್ದರೂ ನಮ್ಮ ನಾಯಕರಾದ ಜಗದೀಶ್ ಶೆಟ್ಟರ್ ಹಾಲಿ ಶಾಸಕರಿಗೇ ಟಿಕೆಟ್ ಎಂದು ಹೇಳಿದ್ದಾರೆ. ಇದೆಲ್ಲವನ್ನು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಚರ್ಚಿಸಲಾಗಿದೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರೇ ಖುದ್ದಾಗಿ ಇಂತಹ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಅವರೆಲ್ಲ ಪಕ್ಷದಲ್ಲೇ ಉಳಿಯುವ ಭರವಸೆ ನೀಡಿದ್ದಾರೆ. ಹೀಗಾಗಿ, ಸರ್ಕಾರಕ್ಕೆ ತೊಂದರೆಯಾಗುವ ಲಕ್ಷಣ ಇಲ್ಲ ಎಂದರು.
ಒಂದು ವೇಳೆ ಅಗತ್ಯ ಬಿದ್ದರೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುತ್ತೇವೆ. ಯಾವ ಪಕ್ಷದೊಂದಿಗೂ ನಾವು ಹೊಂದಾಣಿಕೆ ಮಾಡಿಕೊಂಡಿಲ್ಲ. ಚುನಾವಣೆ ಸಮಯ ಹತ್ತಿರವಿರುವಾಗ ಜೆಡಿಎಸ್ ಸೇರಿದಂತೆ ಯಾವ ಪಕ್ಷವೂ ನಮಗೆ ಬೆಂಬಲ ನೀಡುವುದಿಲ್ಲ. ಆದರೆ ನಮ್ಮ ಶಾಸಕರೆಲ್ಲ ನಮ್ಮ ಜತೆಯಲ್ಲೇ ಇರುವುದರಿಂದ ಸರ್ಕಾರಕ್ಕೆ ಧಕ್ಕೆ ಇಲ್ಲ ಎಂದು ಸಚಿವ ಬಾಲಚಂದ್ರ ಜಾರಕಿಹೊಳಿ ನುಡಿದರು.
ಶಾಸಕರಿಗೆ ಅವರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಹಣ ಬಿಡುಗಡೆ ಹಾಗೂ ತಮ್ಮ ಬೆಂಬಲಿಗರಿಗೆ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಗಳಿದ್ದವು. ಅವುಗಳನ್ನು ಈಡೇರಿಸಲಾಗುತ್ತಿದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ.50ರಷ್ಟು ಸೀಟುಗಳನ್ನು ಸ್ಥಳೀಯ ಶಾಸಕರು ಸೂಚಿಸಿದವರಿಗೇ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ರಾಜ್ಯಾಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ನೀಡಬೇಕು ಅಥವಾ ಕೆ.ಎಸ್. ಈಶ್ವರಪ್ಪ ಅವರನ್ನೇ ಮುಂದುವರಿಸಬೇಕು ಎಂಬ ನಿರ್ಧಾರವನ್ನು ವರಿಷ್ಠರು ತೆಗೆದುಕೊಳ್ಳಬೇಕು. ಸಂಸದ ಅನಂತಕುಮಾರ್ ಹಾಗೂ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ದೆಹಲಿ ವರಿಷ್ಠರು ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡುವುದಕ್ಕೆ ನಾನು ಚಿಕ್ಕವನು ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.