ಬಳ್ಳಾರಿ ಡಿಸಿ, ಚುನಾವಣಾಧಿಕಾರಿ ವಿರುದ್ಧ ಮದನ್ ಪಟೇಲ್ ಕಿಡಿ
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಎಸ್‌ಆರ್ ಪಕ್ಷದ ಅಭ್ಯರ್ಥಿಗಳನ್ನು ಮಾನ್ಯ ಮಾಡಲು ನಿರಾಕರಿಸಿ ಪಕ್ಷೇತರ ಅಭ್ಯರ್ಥಿಗಳು ಎಂದು ಘೋಷಿಸಿರುವ ಬಳ್ಳಾರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ವಿರುದ್ಧ ಪಕ್ಷದ ಪ್ರಧಾನ ಕಾರ್ಯದರ್ಶಿ ಮದನ್ ಪಟೇಲ್ ಕಿಡಿ ಕಾರಿದ್ದಾರೆ.
ನೋಂದಾಯಿತ ಆದರೆ, ಮಾನ್ಯತೆ ಪಡೆದ ರಾಜಕೀಯ ಪಕ್ಷವಾಗಿ ಬಿಎಸ್‌ಆರ್ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಿಯಮಾನುಸಾರ ಇವರನ್ನು ಪಕ್ಷದ ಅಭ್ಯರ್ಥಿಗಳು ಎಂದು ಪರಿಗಣಿಸಬೇಕಿತ್ತು. ಆದರೆ, ಬಳ್ಳಾರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಅವರನ್ನು ಪಕ್ಷೇತರರು ಎಂದು ಪರಿಗಣಿಸಿ ಚುನಾವಣಾ ಕಾನೂನಿನ ಕಾನೂನಾತ್ಮಕ ಆಶಯಗಳಿಗೆ ಅಪಚಾರವೆಸಗಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಎಸ್‌ಆರ್ ಪಕ್ಷದ ಅಭ್ಯರ್ಥಿಗಳು ಸಲ್ಲಿಸಿರುವ ಸಿ ಮತ್ತು ಡಿ ಫಾರಂಗಳನ್ನು ಮಾನ್ಯ ಮಾಡಿ ಅವರನ್ನು ಮಾನ್ಯತೆ ಪಡೆಯದ ನೋಂದಾಯಿತ ಪಕ್ಷದ ಅಭ್ಯರ್ಥಿಗಳೆಂದು ಪರಿಗಣಿಸಿದ್ದಾರೆ. ಅವರೆಲ್ಲರಿಗೂ 'ಸೀಲಿಂಗ್ ಫ್ಯಾನ್' ಚಿಹ್ನೆ ನೀಡಿದ್ದಾರೆ. ಆದರೆ, ಬಳ್ಳಾರಿ ಜಿಲ್ಲಾಧಿಕಾರಿಗಳು ಮಾತ್ರ ಡಿ ಫಾರಂನಲ್ಲಿದ್ದ ಯಾವುದೋ ಒಂದು ಸಣ್ಣ ಬೆರಳಚ್ಚು ದೋಷವನ್ನೇ ದೊಡ್ಡದು ಮಾಡಿ ಜಿಲ್ಲಾದ್ಯಂತ ಕಣಕ್ಕಿಳಿದಿರುವ ಬಿಎಸ್‌ಆರ್ ಪಕ್ಷದ ಅಭ್ಯರ್ಥಿಗಳನ್ನು ಪಕ್ಷೇತರರು ಎಂದು ಸಾರುವ ಮೂಲಕ ಪೂರ್ವಾಗ್ರಹಪೀಡಿತರಂತೆ ನಡೆದುಕೊಂಡಿದ್ದಾರೆ ಎಂದು ಆಪಾದಿಸಿದ್ದಾರೆ.
ಜಿಲ್ಲಾಧಿಕಾರಿಗಳ ಈ ಕ್ರಮದ ವಿರುದ್ಧ ಪ್ರತಿಭಟನೆ ನಡೆಸುವುದರ ಜತೆಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು. ಅಲ್ಲದೆ, ಹೈಕೋರ್ಟ್‌ನಲ್ಲೂ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.